NEET-UG ಮರುಪರೀಕ್ಷೆ ಸುಸೂತ್ರ ನಡೆಸಲು ಕೇಂದ್ರದ ಕಟ್ಟುನಿಟ್ಟಿನ ಸೂಚನೆ

1 Min Read
1 Min Read

ನವದೆಹಲಿ: ನೀಟ್-ಯುಜಿ (NEET-UG) 2026ರ ಮರುಪರೀಕ್ಷೆ ಹಿನ್ನೆಲೆಯಲ್ಲಿ ಭದ್ರತೆ ಹಾಗೂ ವ್ಯವಸ್ಥಾಪನಾ ಸಿದ್ಧತೆಗಳ ಕುರಿತು ಕೇಂದ್ರ ಗೃಹ ಕಾರ್ಯದರ್ಶಿ ಗೋವಿಂದ್ ಮೋಹನ್ ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಸಿದರು.

ಸಭೆಯಲ್ಲಿ ರಾಜ್ಯ ಸರ್ಕಾರಗಳು ಕೈಗೊಂಡಿರುವ ಸಿದ್ಧತೆಗಳನ್ನು ಪರಿಶೀಲಿಸಿದ ಅವರು, ವಿದ್ಯಾರ್ಥಿಗಳ ಅನುಕೂಲತೆ, ಭದ್ರತಾ ವ್ಯವಸ್ಥೆಗಳು ಹಾಗೂ ಪರೀಕ್ಷೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯನ್ನು ಕಾಪಾಡುವ ವಿಚಾರಗಳಿಗೆ ವಿಶೇಷ ಒತ್ತು ನೀಡಿದರು.

ಪರೀಕ್ಷಾ ಪ್ರಕ್ರಿಯೆ ಯಾವುದೇ ಅಡೆತಡೆ ಇಲ್ಲದೆ ಸುಗಮವಾಗಿ ನಡೆಯುವಂತೆ ಎಲ್ಲಾ ರಾಜ್ಯ ಸರ್ಕಾರಗಳು, ಕೇಂದ್ರಾಡಳಿತ ಪ್ರದೇಶಗಳು ಹಾಗೂ ಕೇಂದ್ರ ಸಂಸ್ಥೆಗಳು ನಿಗದಿತ ಭದ್ರತಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಗೋವಿಂದ್ ಮೋಹನ್ ಸೂಚಿಸಿದರು.

ಇದಲ್ಲದೆ, ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಅವರ ಪ್ರಯಾಣ ಮತ್ತು ಸಂಚಾರ ವ್ಯವಸ್ಥೆಗಳನ್ನು ಸುಗಮಗೊಳಿಸುವಂತೆ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ ರೈಲ್ವೆ ಮಂಡಳಿಯ ಅಧ್ಯಕ್ಷರು ವಿದ್ಯಾರ್ಥಿಗಳ ಪ್ರಯಾಣಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಸಭೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕಾರ್ಯದರ್ಶಿ, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ, ಅಂಚೆ ಇಲಾಖೆ ಕಾರ್ಯದರ್ಶಿ, ಸಿಆರ್‌ಪಿಎಫ್, ಸಿಐಎಸ್‌ಎಫ್ ಹಾಗೂ ಬಿಸಿಎಎಸ್ ಮಹಾನಿರ್ದೇಶಕರು, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಹಾನಿರ್ದೇಶಕರು ಸೇರಿದಂತೆ ರಕ್ಷಣಾ ಸಚಿವಾಲಯ ಮತ್ತು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವಾಲಯದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ನೀಟ್-ಯುಜಿ ಮರುಪರೀಕ್ಷೆಯನ್ನು ಸುರಕ್ಷಿತ, ಪಾರದರ್ಶಕ ಹಾಗೂ ನಿಷ್ಪಕ್ಷಪಾತವಾಗಿ ನಡೆಸಲು ಕೇಂದ್ರ ಸರ್ಕಾರ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Share This Article
Leave a Comment