ನವದೆಹಲಿ: 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಲೋಕಸಭಾಧ್ಯಕ್ಷ ಓಂ ಬಿರ್ಲಾ ಅವರು ನವದೆಹಲಿಯ ಸಂಸತ್ ಭವನ ಸಂಕೀರ್ಣದಲ್ಲಿ ಆಯೋಜಿಸಲಾದ ಸಾಮೂಹಿಕ ಯೋಗಾಭ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಈ ಸಂದರ್ಭದಲ್ಲಿ ಯೋಗಾಭ್ಯಾಸ ನಡೆಸಿದ ಬಿರ್ಲಾ, ಯೋಗವು ವ್ಯಕ್ತಿಯೊಳಗೆ ಸಮತೋಲನ, ಆತ್ಮಸಂಯಮ ಮತ್ತು ಸಕಾರಾತ್ಮಕ ಶಕ್ತಿಯನ್ನು ಬೆಳೆಸುವ ಮೂಲಕ ರಾಷ್ಟ್ರದ ಅಭಿವೃದ್ಧಿಗೆ ಅತ್ಯುತ್ತಮ ಕೊಡುಗೆ ನೀಡಲು ಪ್ರೇರೇಪಿಸುತ್ತದೆ ಎಂದು ಹೇಳಿದರು.
ಸಾಮಾಜಿಕ ಜಾಲತಾಣದ ಸಂದೇಶದಲ್ಲಿ ಮಾತನಾಡಿದ ಅವರು, ಭಾರತದ ಪ್ರಾಚೀನ ಯೋಗ ಪರಂಪರೆ ಇಂದು ಇಡೀ ವಿಶ್ವಕ್ಕೆ ಆರೋಗ್ಯಕರ, ಸಮತೋಲನಯುತ ಮತ್ತು ಸೌಹಾರ್ದಯುತ ಜೀವನದ ಮಾರ್ಗವನ್ನು ತೋರಿಸುತ್ತಿದೆ ಎಂದು ಹೇಳಿದರು.
21ನೇ ಶತಮಾನದಲ್ಲಿ ಯೋಗದ ಮಹತ್ವ ಇನ್ನಷ್ಟು ಹೆಚ್ಚಾಗಿದ್ದು, ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಶಾಂತಿ ಮತ್ತು ಆಂತರಿಕ ಶಕ್ತಿಯನ್ನು ವೃದ್ಧಿಸುವ ಜೀವನಶೈಲಿಯಾಗಿ ರೂಪುಗೊಂಡಿದೆ ಎಂದು ಅವರು ಅಭಿಪ್ರಾಯಪಟ್ಟರು.
ಈ ವಿಶೇಷ ದಿನದಂದು ಪ್ರತಿಯೊಬ್ಬರೂ ಯೋಗವನ್ನು ತಮ್ಮ ದೈನಂದಿನ ಜೀವನದ ಅವಿಭಾಜ್ಯ ಅಂಗವನ್ನಾಗಿ ಮಾಡಿಕೊಳ್ಳುವ ಸಂಕಲ್ಪ ಕೈಗೊಳ್ಳಬೇಕು. ಆರೋಗ್ಯಕರ ದೇಹ, ಶಾಂತ ಮನಸ್ಸು ಮತ್ತು ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಯೋಗ ಪ್ರಮುಖ ಸಾಧನವಾಗಿದೆ ಎಂದು ಓಂ ಬಿರ್ಲಾ ಕರೆ ನೀಡಿದರು.
ದೇಶಾದ್ಯಂತ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಉತ್ಸಾಹದಿಂದ ನಡೆಯುತ್ತಿದ್ದು, ಲಕ್ಷಾಂತರ ಜನರು ಯೋಗಾಭ್ಯಾಸದಲ್ಲಿ ಭಾಗವಹಿಸಿ ಆರೋಗ್ಯಕರ ಜೀವನದ ಸಂದೇಶವನ್ನು ಸಾರುತ್ತಿದ್ದಾರೆ.


