ಅಮರಾವತಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದಿನಿಂದ ಎರಡು ದಿನಗಳ ಆಂಧ್ರಪ್ರದೇಶ ಪ್ರವಾಸ ಕೈಗೊಂಡಿದ್ದಾರೆ. ಈ ಅವಧಿಯಲ್ಲಿ ಅವರು ಕೇಂದ್ರ ಬುಡಕಟ್ಟು ವಿಶ್ವವಿದ್ಯಾಲಯ ಹಾಗೂ ಕೇಂದ್ರ ವಿಶ್ವವಿದ್ಯಾಲಯ, ಆಂಧ್ರಪ್ರದೇಶಗಳ ಮೊದಲ ಘಟಿಕೋತ್ಸವ ಸಮಾರಂಭಗಳಲ್ಲಿ ಭಾಗವಹಿಸಲಿದ್ದಾರೆ.
ಇಂದು ವಿಶಾಖಪಟ್ಟಣದಲ್ಲಿ ನಡೆಯಲಿರುವ ಕೇಂದ್ರ ಬುಡಕಟ್ಟು ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವದಲ್ಲಿ ರಾಷ್ಟ್ರಪತಿ ಭಾಗವಹಿಸಲಿದ್ದಾರೆ. 2020ರಿಂದ 2025-26ರ ಶೈಕ್ಷಣಿಕ ವರ್ಷದವರೆಗೆ ಪದವಿ ಹಾಗೂ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ 373 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಿದ್ದಾರೆ.
ಇದೇ ವೇಳೆ, ಶೈಕ್ಷಣಿಕ ಸಾಧನೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ 13 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಪ್ರದಾನ ಮಾಡಲಿದ್ದು, ಇವರಲ್ಲಿ 10 ಮಹಿಳಾ ವಿದ್ಯಾರ್ಥಿನಿಯರು ಸೇರಿದ್ದಾರೆ.
2019ರಲ್ಲಿ ಸ್ಥಾಪನೆಯಾಗಿ, ವಿಜಯನಗರಂ ಕೇಂದ್ರ ಕಚೇರಿಯೊಂದಿಗೆ 2020ರಲ್ಲಿ ಶೈಕ್ಷಣಿಕ ಚಟುವಟಿಕೆ ಆರಂಭಿಸಿದ ಕೇಂದ್ರ ಬುಡಕಟ್ಟು ವಿಶ್ವವಿದ್ಯಾಲಯಕ್ಕೆ ಈ ಘಟಿಕೋತ್ಸವ ಮಹತ್ವದ ಮೈಲಿಗಲ್ಲಾಗಿದೆ.
ಕಾರ್ಯಕ್ರಮದಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ, ಆಂಧ್ರಪ್ರದೇಶ ರಾಜ್ಯಪಾಲ ಎಸ್. ಅಬ್ದುಲ್ ನಜೀರ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.
ನಾಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅನಂತಪುರಕ್ಕೆ ಭೇಟಿ ನೀಡಿ, ಕೇಂದ್ರ ವಿಶ್ವವಿದ್ಯಾಲಯ, ಆಂಧ್ರಪ್ರದೇಶದ ಪ್ರಥಮ ಘಟಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.


