ಅನಂತಪುರ ಘಟಿಕೋತ್ಸವದಲ್ಲಿ ರಾಷ್ಟ್ರಪತಿ ಕರೆ: ಜ್ಞಾನವನ್ನು ಸಮಾಜದ ಒಳಿತಿಗೆ ಬಳಸಿ

2 Min Read
2 Min Read

ವಿಕಸಿತ ಭಾರತ-2047 ನಿರ್ಮಾಣಕ್ಕೆ ಯುವಜನತೆ ಶ್ರೇಷ್ಠತೆಯತ್ತ ಸಾಗಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು

ವಿಕಸಿತ ಭಾರತ-2047 ಗುರಿ ಸಾಕಾರಗೊಳಿಸಲು ಯುವಜನತೆ ಸಮರ್ಪಣೆ, ಪ್ರಾಮಾಣಿಕತೆ ಹಾಗೂ ಉನ್ನತ ನೈತಿಕ ಮೌಲ್ಯಗಳೊಂದಿಗೆ ಶ್ರೇಷ್ಠತೆಯತ್ತ ಹೆಜ್ಜೆ ಹಾಕಬೇಕು ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಕರೆ ನೀಡಿದ್ದಾರೆ.

ಆಂಧ್ರಪ್ರದೇಶದ ಅನಂತಪುರದಲ್ಲಿ ಇಂದು ನಡೆದ ಕೇಂದ್ರೀಯ ಆಂಧ್ರಪ್ರದೇಶ ವಿಶ್ವವಿದ್ಯಾಲಯದ ಮೊದಲ ಘಟಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, ದೇಶವನ್ನು ಸಮೃದ್ಧ ಹಾಗೂ ಸಮಗ್ರ ಅಭಿವೃದ್ಧಿಯತ್ತ ಕೊಂಡೊಯ್ಯುವಲ್ಲಿ ಯುವಜನರ ಪ್ರತಿಭೆ, ಶಕ್ತಿ ಮತ್ತು ಬದ್ಧತೆ ನಿರ್ಣಾಯಕ ಪಾತ್ರ ವಹಿಸಲಿದೆ ಎಂದು ಹೇಳಿದರು.

ಪದವಿ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಿದ ರಾಷ್ಟ್ರಪತಿ, ಈ ಘಟಿಕೋತ್ಸವವು ವಿಶ್ವವಿದ್ಯಾಲಯದ ಬೆಳವಣಿಗೆಯಲ್ಲಿಯೂ ಹಾಗೂ ಮೊದಲ ಪದವೀಧರರ ಜೀವನದಲ್ಲಿಯೂ ಮಹತ್ವದ ಮೈಲಿಗಲ್ಲಾಗಿದೆ ಎಂದು ತಿಳಿಸಿದರು. ಪದಕ ಗಳಿಕೆಯಲ್ಲಿ ವಿದ್ಯಾರ್ಥಿನಿಯರು ಮೇಲುಗೈ ಸಾಧಿಸಿರುವುದು ದೇಶದ ಯುವತಿಯರ ಹೆಚ್ಚುತ್ತಿರುವ ಆತ್ಮವಿಶ್ವಾಸ ಮತ್ತು ಸಾಧನೆಯ ಮನೋಭಾವವನ್ನು ಪ್ರತಿಬಿಂಬಿಸುತ್ತದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ತಂತ್ರಜ್ಞಾನ ಕ್ಷೇತ್ರದಲ್ಲಿ ವೇಗವಾಗಿ ಆಗುತ್ತಿರುವ ಬದಲಾವಣೆಗಳ ಹಿನ್ನೆಲೆಯಲ್ಲಿ ಜೀವನಪೂರ್ತಿ ಕಲಿಕೆಯ ಮನೋಭಾವ ಬೆಳೆಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಅವರು ಸಲಹೆ ನೀಡಿದರು. ಪದವಿ ಪಡೆಯುವುದರೊಂದಿಗೆ ಕಲಿಕೆ ಅಂತ್ಯವಾಗಬಾರದು; ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಬೇಕು, ಹೊಸ ಆಲೋಚನೆಗಳನ್ನು ಅನ್ವೇಷಿಸಬೇಕು ಹಾಗೂ ನವೋದ್ಯಮವನ್ನು ಅಪ್ಪಿಕೊಳ್ಳಬೇಕು ಎಂದು ಕರೆ ನೀಡಿದರು.

ಪ್ರಾಮಾಣಿಕತೆ, ಕರುಣೆ, ಸಹಾನುಭೂತಿ ಮತ್ತು ಪ್ರಕೃತಿಯ ಮೇಲಿನ ಗೌರವವೇ ಸುಸ್ಥಿರ ಅಭಿವೃದ್ಧಿಯ ಮೂಲ ತತ್ವಗಳಾಗಿವೆ ಎಂದು ರಾಷ್ಟ್ರಪತಿ ಹೇಳಿದರು. ಉದ್ಯಮಿ, ವಿಜ್ಞಾನಿ, ಸರ್ಕಾರಿ ಅಧಿಕಾರಿ ಅಥವಾ ಯಾವುದೇ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡರೂ ತಮ್ಮ ಜ್ಞಾನವನ್ನು ಸಮಾಜದ, ವಿಶೇಷವಾಗಿ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಬಳಸಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ವಿಶ್ವವಿದ್ಯಾಲಯವು ಗುಣಮಟ್ಟದ ಶಿಕ್ಷಣ ಮತ್ತು ಸುಸ್ಥಿರ ಅಭಿವೃದ್ಧಿಗೆ ನೀಡುತ್ತಿರುವ ಆದ್ಯತೆಯನ್ನು ಶ್ಲಾಘಿಸಿದ ರಾಷ್ಟ್ರಪತಿ, ಇದು ಮುಂದಿನ ದಿನಗಳಲ್ಲಿ ಶ್ರೇಷ್ಠ ಶಿಕ್ಷಣ ಕೇಂದ್ರವಾಗಿ ಬೆಳೆದು ವಿಕಸಿತ ಭಾರತ-2047 ಗುರಿ ಸಾಧನೆಗೆ ಮಹತ್ವದ ಕೊಡುಗೆ ನೀಡಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ರಾಷ್ಟ್ರಪತಿ 1,268 ಪದವೀಧರರಿಗೆ ಪದವಿ ಪ್ರದಾನ ಮಾಡಿದ್ದು, ಶೈಕ್ಷಣಿಕ ಸಾಧನೆಯಲ್ಲಿ ಮಿಂಚಿದ 56 ವಿದ್ಯಾರ್ಥಿಗಳಿಗೆ ಚಿನ್ನದ ಪದಕಗಳನ್ನು ವಿತರಿಸಿದರು.

ಕಾರ್ಯಕ್ರಮದಲ್ಲಿ ಆಂಧ್ರಪ್ರದೇಶ ರಾಜ್ಯಪಾಲ ಎಸ್. ಅಬ್ದುಲ್ ನಜೀರ್, ರಾಜ್ಯ ಶಿಕ್ಷಣ ಸಚಿವ ನಾರಾ ಲೋಕೇಶ್, ಹಣಕಾಸು ಸಚಿವ ಪಿ. ಕೇಶವ್, ವಿಶ್ವವಿದ್ಯಾಲಯದ ಕುಲಾಧಿಪತಿ ಡಾ. ಶಂಕರ್ ಆಚಾರ್ಯ, ಕುಲಪತಿ ಎಸ್.ಎ. ಕೋರಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Share This Article
Leave a Comment