ಜಕಾರ್ತಾ: ಪ್ರಧಾನಿ ನರೇಂದ್ರ ಮೋದಿ ಅವರ ಇಂಡೋನೇಷ್ಯಾ ಪ್ರವಾಸದ ವೇಳೆ ಭಾರತ-ಇಂಡೋನೇಷ್ಯಾ ಸಂಬಂಧ ಮತ್ತಷ್ಟು ಬಲಗೊಂಡಿದೆ. ಇಂಡೋನೇಷ್ಯಾ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಅವರು ಜಕಾರ್ತಾದ ಇಸ್ತಾನಾ ಮರ್ಡೆಕಾ ರಾಷ್ಟ್ರಪತಿ ಭವನದಲ್ಲಿ ಪ್ರಧಾನಿ ಮೋದಿಗೆ ದೇಶದ ಅತ್ಯುನ್ನತ ನಾಗರಿಕ ಗೌರವವಾದ ‘ಬಿಂಟಾಂಗ್ ಅದಿಪುರ್ಣ’ (Bintang Adipurna) ಪ್ರಶಸ್ತಿಯನ್ನು ಪ್ರದಾನ ಮಾಡಿದರು.
ಭಾರತ-ಇಂಡೋನೇಷ್ಯಾ ಸಮಗ್ರ ಕಾರ್ಯತಂತ್ರದ ಸಹಭಾಗಿತ್ವವನ್ನು ಮತ್ತಷ್ಟು ಬಲಪಡಿಸಲು ಹಾಗೂ ಉಭಯ ದೇಶಗಳ ನಡುವಿನ ಐತಿಹಾಸಿಕ ಸ್ನೇಹವನ್ನು ವೃದ್ಧಿಸಲು ಪ್ರಧಾನಿ ಮೋದಿ ನೀಡಿರುವ ಕೊಡುಗೆಯನ್ನು ಗುರುತಿಸಿ ಈ ಗೌರವ ನೀಡಲಾಗಿದೆ.
ಇದಕ್ಕೂ ಮುನ್ನ ಪ್ರಧಾನಿ ಮೋದಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ ಕೋರಲಾಯಿತು. ಭಾರತದ ಹಾಗೂ ಇಂಡೋನೇಷ್ಯಾದ ರಾಷ್ಟ್ರಧ್ವಜಗಳನ್ನು ಹಿಡಿದಿದ್ದ ಮಕ್ಕಳ ಸ್ವಾಗತದ ನಡುವೆ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಅವರು ಪ್ರಧಾನಿ ಮೋದಿಯನ್ನು ಬರಮಾಡಿಕೊಂಡರು.
ಬಳಿಕ ಉಭಯ ನಾಯಕರು ನಿಯೋಗ ಮಟ್ಟದ ಮಾತುಕತೆ ನಡೆಸಿ ದ್ವಿಪಕ್ಷೀಯ ಸಂಬಂಧಗಳ ಸಂಪೂರ್ಣ ಆಯಾಮವನ್ನು ಪರಿಶೀಲಿಸಿದರು. ವ್ಯಾಪಾರ, ರಕ್ಷಣಾ ಕ್ಷೇತ್ರ, ಸಾಗರ ಭದ್ರತೆ, ಡಿಜಿಟಲ್ ತಂತ್ರಜ್ಞಾನ, ಆರೋಗ್ಯ, ಶಿಕ್ಷಣ, ಕೃಷಿ, ಸಾಂಸ್ಕೃತಿಕ ವಿನಿಮಯ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸಹಕಾರವನ್ನು ಇನ್ನಷ್ಟು ವಿಸ್ತರಿಸುವ ಕುರಿತು ಚರ್ಚಿಸಿದರು.
ಈ ಸಂದರ್ಭದಲ್ಲಿ ರಕ್ಷಣಾ ಸಹಕಾರ, ಮಹತ್ವದ ಖನಿಜಗಳು (Critical Minerals), ಕೃಷಿ, ಉಕ್ಕು ಉತ್ಪಾದನೆ, ಸಾಗರ ಸಹಕಾರ ಹಾಗೂ ಉದಯೋನ್ಮುಖ ತಂತ್ರಜ್ಞಾನಗಳ ಕ್ಷೇತ್ರಗಳಿಗೆ ಸಂಬಂಧಿಸಿದ ಹಲವು ಒಪ್ಪಂದ ಪತ್ರಗಳಿಗೆ (MoUs) ಸಹಿ ಹಾಕಲಾಯಿತು.
ಇದೇ ವೇಳೆ, ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ (IIM) ಬೆಂಗಳೂರು ಸಂಸ್ಥೆಯ ಶಾಖೆಯನ್ನು ಜಕಾರ್ತಾದಲ್ಲಿ ಆರಂಭಿಸಲು ಉಭಯ ದೇಶಗಳು ಒಪ್ಪಿಗೆ ಸೂಚಿಸಿವೆ. ಜೊತೆಗೆ ಉತ್ಪಾದನಾ ವಲಯ, ಆಹಾರ ಭದ್ರತೆ ಹಾಗೂ ಡಿಜಿಟಲ್ ತಂತ್ರಜ್ಞಾನ ಕ್ಷೇತ್ರಗಳಲ್ಲಿಯೂ ಸಹಕಾರವನ್ನು ಮತ್ತಷ್ಟು ಬಲಪಡಿಸಲು ನಿರ್ಧರಿಸಲಾಯಿತು.
ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಇಂಡೋನೇಷ್ಯಾ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ, ಭಾರತವನ್ನು ವಿಶ್ವಾಸಾರ್ಹ ಕಾರ್ಯತಂತ್ರದ ಪಾಲುದಾರ ರಾಷ್ಟ್ರವೆಂದು ಬಣ್ಣಿಸಿ, ಹಲವು ಪ್ರಮುಖ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರ ವಿಸ್ತರಿಸುತ್ತಿರುವುದನ್ನು ಸ್ವಾಗತಿಸಿದರು.
ಪ್ರಧಾನಿ ಮೋದಿ ಅವರ ಈ ಭೇಟಿ ಭಾರತ-ಇಂಡೋನೇಷ್ಯಾ ಸಮಗ್ರ ಕಾರ್ಯತಂತ್ರದ ಸಹಭಾಗಿತ್ವಕ್ಕೆ ಹೊಸ ಚೈತನ್ಯ ನೀಡುವ ಜೊತೆಗೆ ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಉಭಯ ರಾಷ್ಟ್ರಗಳ ಸಹಕಾರವನ್ನು ಇನ್ನಷ್ಟು ಗಟ್ಟಿಗೊಳಿಸುವ ಮಹತ್ವದ ಹೆಜ್ಜೆಯಾಗಿದೆ.


