ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಶುಕ್ರವಾರ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಮೂವರು ಶಾಲಾ ವಿದ್ಯಾರ್ಥಿಗಳು ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಹಲವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ.
ಅಜೀಂಗಂಜ್–ಕಟ್ವಾ ರೈಲು ಮಾರ್ಗದ ಕರ್ಣಸುಬರ್ಣ ರೈಲು ನಿಲ್ದಾಣ ಮತ್ತು ಗೋಬಿಂದಪುರ ಲೆವೆಲ್ ಕ್ರಾಸಿಂಗ್ ನಡುವಿನ ಮಾನವರಹಿತ (ತೆರೆದ) ಲೆವೆಲ್ ಕ್ರಾಸಿಂಗ್ ದಾಟುತ್ತಿದ್ದ ವೇಳೆ ಶಾಲಾ ವಾಹನಕ್ಕೆ ವೇಗವಾಗಿ ಬಂದ ರೈಲು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಡಿಕ್ಕಿಯ ರಭಸಕ್ಕೆ ಶಾಲಾ ವಾಹನ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲೇ ಭಾರೀ ಆತಂಕದ ವಾತಾವರಣ ನಿರ್ಮಾಣವಾಯಿತು.
ಅಪಘಾತದಲ್ಲಿ ನಾಲ್ವರು ವಿದ್ಯಾರ್ಥಿಗಳು ಹಾಗೂ ವಾಹನ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಬೆರ್ಹಾಂಪುರದ ಮುರ್ಷಿದಾಬಾದ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಅಧಿಕಾರಿಗಳ ಪ್ರಕಾರ, ಅಪಘಾತ ಸಂಭವಿಸಿದ ವೇಳೆ ವಾಹನದಲ್ಲಿ ಒಟ್ಟು 10 ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು.
ಘಟನೆಯ ಬಳಿಕ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ರೈಲ್ವೆ ಗೇಟ್ ಸಿಬ್ಬಂದಿಯ ನಿರ್ಲಕ್ಷ್ಯವೇ ದುರಂತಕ್ಕೆ ಕಾರಣ ಎಂದು ಆರೋಪಿಸಿದ್ದಾರೆ.
ಪ್ರಕರಣ ಸಂಬಂಧ ಪೊಲೀಸರು ಹಾಗೂ ರೈಲ್ವೆ ಇಲಾಖೆ ಪ್ರತ್ಯೇಕ ತನಿಖೆ ಆರಂಭಿಸಿವೆ. ಅಪಘಾತದ ನಿಖರ ಕಾರಣ ಪತ್ತೆಹಚ್ಚಲು ರೈಲ್ವೆಯ ವಿಶೇಷ ತನಿಖಾ ತಂಡವೂ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ.


