ನವದೆಹಲಿ: ಕೇಂದ್ರ ಸರ್ಕಾರವು ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳಲ್ಲಿ ಮಹತ್ವದ ಆಡಳಿತಾತ್ಮಕ ಬದಲಾವಣೆಗಳನ್ನು ಮಾಡಿ, ಹೊಸ ಕಾರ್ಯದರ್ಶಿಗಳನ್ನು ನೇಮಕ ಮಾಡಿದೆ. ಈ ನೇಮಕಾತಿಗಳಿಗೆ ಕೇಂದ್ರ ಸಚಿವ ಸಂಪುಟದ ನೇಮಕಾತಿ ಸಮಿತಿ (Appointments Committee of the Cabinet – ACC) ಅನುಮೋದನೆ ನೀಡಿದೆ.
ಶಿಕ್ಷಣ ಸಚಿವಾಲಯದ ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿಯಾಗಿದ್ದ ವಿನೀತ್ ಜೋಶಿ ಅವರನ್ನು ಪಂಚಾಯತ್ ರಾಜ್ ಸಚಿವಾಲಯದ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಅವರ ಸ್ಥಾನಕ್ಕೆ ನರೇಶ್ ಪಾಲ್ ಗಂಗ್ವಾರ್ ಅವರನ್ನು ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.
ಇದೇ ವೇಳೆ ಟಿ.ಕೆ. ಅನಿಲ್ ಕುಮಾರ್ ಅವರನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿಯಾಗಿದ್ದ ಕಟಿಕಿಥಾಲ ಶ್ರೀನಿವಾಸ್ ಅವರನ್ನು ಈಶಾನ್ಯ ಪ್ರದೇಶ ಅಭಿವೃದ್ಧಿ ಸಚಿವಾಲಯದ (DoNER) ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.
ಕೇಶವ್ ಚಂದ್ರ ಅವರನ್ನು ಗಣಿ ಸಚಿವಾಲಯದ ಕಾರ್ಯದರ್ಶಿಯಾಗಿ, ಚಂದ್ರ ಭೂಷಣ್ ಕುಮಾರ್ ಅವರನ್ನು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ಇದಲ್ಲದೆ, ಸುಶೀಲ್ ಕುಮಾರ್ ಲೋಹಾನಿ ಅವರನ್ನು ಪಶುಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆಯ ಕಾರ್ಯದರ್ಶಿಯಾಗಿ, ಸತೇಂದ್ರ ಸಿಂಗ್ ಅವರನ್ನು ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಯಾಗಿ ಹಾಗೂ ಡಿ. ತಾರಾ ಅವರನ್ನು ರಾಜಧಾನಿ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ಅದೇ ರೀತಿ, ಪಿಯೂಷ್ ಗೋಯಲ್ ಅವರನ್ನು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (NHRC) ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.


