ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಆಗಸ್ಟ್ 7ರವರೆಗೆ ಮಧ್ಯಮ ಪ್ರಮಾಣದ ಮಳೆ ಹಾಗೂ ಗುಡುಗು ಸಹಿತ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಜಮ್ಮು ವಿಭಾಗದ ಕೆಲ ಪ್ರದೇಶಗಳಲ್ಲಿ ಭಾರೀ ಮಳೆ, ಹಠಾತ್ ಪ್ರವಾಹ (Flash Flood), ಭೂಕುಸಿತ ಮತ್ತು ಬಂಡೆಗಳು ಉರುಳುವ ಅಪಾಯ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.
ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಇಂದು ಮಧ್ಯಾಹ್ನ ಹಾಗೂ ಸಂಜೆ ವೇಳೆಯಲ್ಲಿ ಕೇಂದ್ರಾಡಳಿತ ಪ್ರದೇಶದ ಬಹುತೇಕ ಭಾಗಗಳಲ್ಲಿ ಒಂದು ಅಥವಾ ಎರಡು ಬಾರಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಜಮ್ಮು ವಿಭಾಗದ ಕೆಲವು ಪ್ರದೇಶಗಳಲ್ಲಿ ಅಲ್ಪಾವಧಿಯಲ್ಲೇ ಭಾರೀ ಮಳೆಯಾಗುವ ಸಾಧ್ಯತೆಯೂ ಇದೆ.
ಆಗಸ್ಟ್ 1ರಿಂದ 4ರವರೆಗೆ ಮಳೆಯ ಅಬ್ಬರ
ಆಗಸ್ಟ್ 1ರಂದು ಜಮ್ಮು ಮತ್ತು ಕಾಶ್ಮೀರದ ವಿವಿಧ ಭಾಗಗಳಲ್ಲಿ ಸಾಧಾರಣ ಮಳೆ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೆಲವೆಡೆ ಅಲ್ಪಾವಧಿಯ ತೀವ್ರ ಮಳೆಯೂ ಸುರಿಯಬಹುದು.
ಆಗಸ್ಟ್ 2ರಿಂದ 4ರವರೆಗೆ, ವಿಶೇಷವಾಗಿ ಬೆಳಗಿನ ಜಾವ ಹಾಗೂ ಮಧ್ಯಾಹ್ನ-ಸಂಜೆ ವೇಳೆಯಲ್ಲಿ, ಹಲವೆಡೆ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗಲಿದೆ. ಜಮ್ಮು ವಿಭಾಗದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆ ಹಾಗೂ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಆಗಸ್ಟ್ 5ರಿಂದ 7ರವರೆಗೆ ಎಚ್ಚರಿಕೆ ಮುಂದುವರಿಕೆ
ಆಗಸ್ಟ್ 5ರಿಂದ 7ರವರೆಗೆ ರಾಜ್ಯದ ವಿವಿಧ ಪ್ರದೇಶಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಈ ಅವಧಿಯಲ್ಲೂ ಕೆಲವೆಡೆ ತೀವ್ರ ಮಳೆಯಾಗುವ ಸಾಧ್ಯತೆ ಇದೆ.
ಹಠಾತ್ ಪ್ರವಾಹ, ಭೂಕುಸಿತದ ಎಚ್ಚರಿಕೆ
ಹವಾಮಾನ ಇಲಾಖೆ ಇಂದು ಹಾಗೂ ಆಗಸ್ಟ್ 2 ಮತ್ತು 3ರಂದು ಜಮ್ಮು ವಿಭಾಗದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆ ನೀಡಿದೆ. ತೀವ್ರ ಮಳೆಯಿಂದಾಗಿ ಹಠಾತ್ ಪ್ರವಾಹ, ಭೂಕುಸಿತ, ಮಣ್ಣಿನ ಕುಸಿತ ಹಾಗೂ ಬಂಡೆಗಳು ಉರುಳುವ ಘಟನೆಗಳು ಸಂಭವಿಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅನಗತ್ಯ ಪ್ರಯಾಣವನ್ನು ತಪ್ಪಿಸಿ, ಸ್ಥಳೀಯ ಆಡಳಿತದ ಸೂಚನೆಗಳನ್ನು ಪಾಲಿಸುವಂತೆ ಮನವಿ ಮಾಡಲಾಗಿದೆ.


