ನವದೆಹಲಿ: ದೇಶದ ಕೃಷಿ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರದಿಂದ ಮಹತ್ವದ ಆರ್ಥಿಕ ನೆರವು ದೊರೆತಿದೆ. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ರಾಷ್ಟ್ರೀಯ ವಿದ್ಯಾರ್ಥಿವೇತನ ಪೋರ್ಟಲ್ (NSP) ಮೂಲಕ ಕೃಷಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಹಾಗೂ ಫೆಲೋಶಿಪ್ ಮೊತ್ತವನ್ನು ಬಿಡುಗಡೆ ಮಾಡಿದ್ದಾರೆ.
ಈ ಯೋಜನೆಯಡಿ ದೇಶಾದ್ಯಂತ 6 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ₹21 ಕೋಟಿಗೂ ಹೆಚ್ಚು ಮೊತ್ತವನ್ನು ನೇರ ಲಾಭ ವರ್ಗಾವಣೆ (DBT) ಮೂಲಕ ಅವರ ಖಾತೆಗಳಿಗೆ ಜಮೆ ಮಾಡಲಾಗಿದೆ. ಹೊಸ ವ್ಯವಸ್ಥೆಯ ಮೂಲಕ ಕೃಷಿ ವಿದ್ಯಾರ್ಥಿಗಳಿಗೆ ಇನ್ನು ಮುಂದೆ ಪ್ರತಿ ತಿಂಗಳು ವಿದ್ಯಾರ್ಥಿವೇತನದ ಮೊತ್ತವನ್ನು ನೇರವಾಗಿ DBT ಮೂಲಕ ಪಾವತಿಸಲಾಗುತ್ತಿದ್ದು, ಆರ್ಥಿಕ ನೆರವು ಪಡೆಯುವ ಪ್ರಕ್ರಿಯೆ ಮತ್ತಷ್ಟು ಸರಳ ಹಾಗೂ ಸಮಯಬದ್ಧವಾಗಲಿದೆ.
ಕಾರ್ಯಕ್ರಮದಲ್ಲಿ ಮಾತನಾಡಿದ ಶಿವರಾಜ್ ಸಿಂಗ್ ಚೌಹಾಣ್, ವಿದ್ಯಾರ್ಥಿವೇತನವನ್ನು ಕೇವಲ ಆರ್ಥಿಕ ನೆರವಿನ ರೂಪದಲ್ಲಿ ನೋಡಬಾರದು. ಕೃಷಿ ಶಿಕ್ಷಣವನ್ನು ಬಲಪಡಿಸುವುದು, ಪ್ರಾಯೋಗಿಕ ಕಲಿಕೆಗೆ ಉತ್ತೇಜನ ನೀಡುವುದು ಹಾಗೂ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶಗಳನ್ನು ಕಲ್ಪಿಸುವಲ್ಲಿ ವಿದ್ಯಾರ್ಥಿವೇತನ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಹೇಳಿದರು.
DBT ವ್ಯವಸ್ಥೆಯಿಂದ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಸಮಯದಲ್ಲೇ ಆರ್ಥಿಕ ನೆರವು ದೊರೆಯಲಿದೆ. ಇದರಿಂದ ಸಾಂಪ್ರದಾಯಿಕ ವ್ಯವಸ್ಥೆಯಲ್ಲಿದ್ದ ವಿಳಂಬಗಳನ್ನು ಕಡಿಮೆ ಮಾಡುವುದರ ಜೊತೆಗೆ, ವಿದ್ಯಾರ್ಥಿವೇತನ ವಿತರಣೆಯಲ್ಲಿ ಪಾರದರ್ಶಕತೆ ಹೆಚ್ಚಲಿದೆ ಎಂದು ಸಚಿವರು ತಿಳಿಸಿದರು.
ಸಮಯಕ್ಕೆ ಸರಿಯಾಗಿ ಆರ್ಥಿಕ ನೆರವು ದೊರೆತರೆ ವಿದ್ಯಾರ್ಥಿಗಳು ತಮ್ಮ ಶಿಕ್ಷಣದತ್ತ ಹೆಚ್ಚಿನ ಗಮನ ಹರಿಸಲು ಸಾಧ್ಯವಾಗಲಿದೆ ಎಂದು ಚೌಹಾಣ್ ಹೇಳಿದರು. NSP-DBT ವ್ಯವಸ್ಥೆಯು ವಿದ್ಯಾರ್ಥಿವೇತನ ವಿತರಣೆಯನ್ನು ವೇಗವಾಗಿ, ಪಾರದರ್ಶಕವಾಗಿ ಹಾಗೂ ಸುಗಮವಾಗಿ ನಡೆಸಲು ಸಹಕಾರಿಯಾಗಲಿದೆ ಎಂದರು.
ಮುಂದಿನ ದಿನಗಳಲ್ಲಿ ಭಾರತದ ಕೃಷಿ ಕ್ಷೇತ್ರದ ಅಗತ್ಯಗಳಿಗೆ ತಕ್ಕಂತೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲು ಕೃಷಿ ಶಿಕ್ಷಣ, ಸಂಶೋಧನೆ ಹಾಗೂ ಪ್ರಾಯೋಗಿಕ ತರಬೇತಿಗೆ ಹೆಚ್ಚಿನ ಒತ್ತು ನೀಡುವ ಅಗತ್ಯವಿದೆ ಎಂದು ಸಚಿವರು ಅಭಿಪ್ರಾಯಪಟ್ಟರು.


