ಚಮೋಲಿ: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಯ ಸುರಂಗದಲ್ಲಿ ಭೂಕುಸಿತ ಹಾಗೂ ನೀರು ಸೋರಿಕೆಯಿಂದ ಸಂಭವಿಸಿದ ದುರ್ಘಟನೆಯಲ್ಲಿ ಏಳು ಮಂದಿ ಮೃತಪಟ್ಟಿದ್ದು, 14 ಜನರು ಗಾಯಗೊಂಡಿದ್ದಾರೆ.
ನಿನ್ನೆ ಸಂಜೆ ಪಿಪಲ್ಕೋಟಿ ಪ್ರದೇಶದಲ್ಲಿರುವ ಟೆಹ್ರಿ ಹೈಡ್ರೋ ಡೆವಲಪ್‌ಮೆಂಟ್ ಕಾರ್ಪೊರೇಷನ್ (THDC) ಯೋಜನಾ ಸ್ಥಳದಲ್ಲಿ ಈ ಘಟನೆ ಸಂಭವಿಸಿದೆ. ಭೂಕುಸಿತದೊಂದಿಗೆ ಸುರಂಗದೊಳಗೆ ನೀರು ನುಗ್ಗಿದ ಪರಿಣಾಮ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದರು.
ರಕ್ಷಣಾ ಕಾರ್ಯಾಚರಣೆಯ ಮೂಲಕ ಸುರಂಗದಿಂದ ಒಟ್ಟು 21 ಮಂದಿಯನ್ನು ಹೊರಗೆ ಕರೆತರಲಾಗಿದೆ. ಇವರಲ್ಲಿ ಏಳು ಮಂದಿ ಮೃತಪಟ್ಟಿರುವುದಾಗಿ ಘೋಷಿಸಲಾಗಿದ್ದು, ಗಾಯಗೊಂಡ 14 ಮಂದಿಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯ ಬಗ್ಗೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಸಮರೋಪಾದಿಯಲ್ಲಿ ಕೈಗೊಳ್ಳುವಂತೆ ಸಂಬಂಧಿತ ಎಲ್ಲ ಇಲಾಖೆಗಳು ಹಾಗೂ ಸಂಸ್ಥೆಗಳಿಗೆ ಅವರು ಸೂಚನೆ ನೀಡಿದ್ದಾರೆ.
ಸುರಂಗದಲ್ಲಿ ಸಿಲುಕಿದ್ದವರನ್ನು ಸುರಕ್ಷಿತವಾಗಿ ಹೊರತರುವ ಹಾಗೂ ಗಾಯಾಳುಗಳಿಗೆ ತ್ವರಿತ ವೈದ್ಯಕೀಯ ನೆರವು ಒದಗಿಸುವ ನಿಟ್ಟಿನಲ್ಲಿ ರಕ್ಷಣಾ ತಂಡಗಳು ಕಾರ್ಯಾಚರಣೆ ಮುಂದುವರಿಸಿವೆ.


