ಕಠ್ಮಂಡು, ಆಗಸ್ಟ್ 29: ನೇಪಾಳ ಮತ್ತು ಟಿಬೆಟ್‌ನಲ್ಲಿ ಸಂಭವಿಸಿದ ಭೀಕರ ಹಠಾತ್ ಪ್ರವಾಹದಿಂದ ಉಂಟಾಗಿರುವ ಸಂಕಷ್ಟ ಮತ್ತಷ್ಟು ಗಂಭೀರವಾಗಿದ್ದು, ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 579ಕ್ಕೆ ಏರಿಕೆಯಾಗಿದೆ. ಇನ್ನೂ 1,924 ಮಂದಿ ನಾಪತ್ತೆಯಾಗಿದ್ದಾರೆ ಎಂದು ನೇಪಾಳದ ರಾಷ್ಟ್ರೀಯ ವಿಪತ್ತು ಅಪಾಯ ಕಡಿತ ಮತ್ತು ನಿರ್ವಹಣಾ ಪ್ರಾಧಿಕಾರ (NDRRMA) ತಿಳಿಸಿದೆ.
ಪ್ರಾಧಿಕಾರ ಬಿಡುಗಡೆ ಮಾಡಿರುವ ಮಾಹಿತಿಯ ಪ್ರಕಾರ, ಇದುವರೆಗೆ 579 ಮೃತದೇಹಗಳನ್ನು ಪತ್ತೆಹಚ್ಚಿ ಹೊರತೆಗೆಯಲಾಗಿದೆ. ಪ್ರವಾಹದಲ್ಲಿ ಗಾಯಗೊಂಡಿರುವ 101 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಾಪತ್ತೆಯಾದವರ ಪಟ್ಟಿಯಲ್ಲಿ ಜಲವಿದ್ಯುತ್ ಯೋಜನೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದವರು, ವಿದೇಶಿ ಪ್ರಜೆಗಳು, ಸ್ಥಳೀಯ ನಾಗರಿಕರು, ಭದ್ರತಾ ಸಿಬ್ಬಂದಿ ಹಾಗೂ ಸರ್ಕಾರಿ ನೌಕರರು ಸೇರಿದ್ದಾರೆ.
ಜಲವಿದ್ಯುತ್ ಯೋಜನೆಗಳ 933 ಮಂದಿ ನಾಪತ್ತೆ
ದುರಂತದ ಬಳಿಕ ಜಲವಿದ್ಯುತ್ ಯೋಜನೆಗಳಿಗೆ ಸಂಬಂಧಿಸಿದ 933 ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಇದೇ ವೇಳೆ 517 ವಿದೇಶಿ ಪ್ರಜೆಗಳ ಕುರಿತು ಇನ್ನೂ ಮಾಹಿತಿ ಲಭ್ಯವಾಗಿಲ್ಲ.
ಪ್ರವಾಹ ಪೀಡಿತ ನೇಪಾಳಕ್ಕೆ ಭಾರತ ತನ್ನ ಮಾನವೀಯ ನೆರವನ್ನು ಮತ್ತಷ್ಟು ಹೆಚ್ಚಿಸಿದೆ. ಪರಿಹಾರ ಸಾಮಗ್ರಿಗಳನ್ನು ಹೊತ್ತ ಮೂರನೇ ವಿಮಾನವು 10 ಟನ್ ಮಾನವೀಯ ನೆರವಿನೊಂದಿಗೆ ನಿನ್ನೆ ಸಂಜೆ ಕಠ್ಮಂಡುವಿನತ್ತ ಹೊರಟಿದೆ.
ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್ ನಿನ್ನೆ ಮಾಧ್ಯಮಗಳೊಂದಿಗೆ ಮಾತನಾಡಿ, ನೇಪಾಳದಲ್ಲಿ ನಡೆಯುತ್ತಿರುವ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳಿಗೆ ಭಾರತ ಸಂಪೂರ್ಣ ಬೆಂಬಲ ನೀಡುತ್ತಿದೆ ಎಂದು ತಿಳಿಸಿದ್ದಾರೆ.
320 ಭಾರತೀಯರ ಸಂಪರ್ಕ ಇನ್ನೂ ಸಾಧ್ಯವಾಗಿಲ್ಲ
ನೇಪಾಳದ ಪ್ರವಾಹ ದುರಂತದ ಬಳಿಕ 320 ಭಾರತೀಯ ಪ್ರಜೆಗಳನ್ನು ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ ಅಥವಾ ಅವರು ನಾಪತ್ತೆಯಾಗಿದ್ದಾರೆ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ತಿಳಿಸಿದೆ.
ಪ್ರವಾಹದಿಂದ ಸಂಕಷ್ಟಕ್ಕೊಳಗಾದ ನೆರೆಯ ರಾಷ್ಟ್ರ ನೇಪಾಳಕ್ಕೆ ಪರಿಹಾರ ಸಾಮಗ್ರಿ, ರಕ್ಷಣಾ ನೆರವು ಸೇರಿದಂತೆ ಅಗತ್ಯ ಮಾನವೀಯ ಸಹಾಯವನ್ನು ಭಾರತ ನಿರಂತರವಾಗಿ ಒದಗಿಸುತ್ತಿದೆ.


