ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಹಾಗೂ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಅವರು ಶುಭಾಶಯಗಳನ್ನು ಕೋರಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಾಮಾಜಿಕ ಜಾಲತಾಣದ ಸಂದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಾರ್ವಜನಿಕ ಸೇವೆ ಹಾಗೂ ರಾಷ್ಟ್ರ ನಿರ್ಮಾಣಕ್ಕೆ ನೀಡಿರುವ ಕೊಡುಗೆಯನ್ನು ಶ್ಲಾಘಿಸಿದ್ದಾರೆ. ಮುಖ್ಯಮಂತ್ರಿಯಾಗಿ ಹಾಗೂ ಪ್ರಧಾನಮಂತ್ರಿಯಾಗಿ ಕಳೆದ 25 ವರ್ಷಗಳ ಸಾರ್ವಜನಿಕ ಜೀವನದಲ್ಲಿ ಅವರು ನೀಡಿದ ಸೇವೆಯನ್ನು ರಾಷ್ಟ್ರಪತಿ ಸ್ಮರಿಸಿದ್ದಾರೆ.
ಉತ್ತಮ ಆಡಳಿತಕ್ಕೆ ಹಲವು ಹೊಸ ಮಾನದಂಡಗಳನ್ನು ರೂಪಿಸಿರುವ ಪ್ರಧಾನಿ ಮೋದಿ ಅವರು ಸಮಗ್ರ ಅಭಿವೃದ್ಧಿಗೆ ವೇಗ ನೀಡಿದ್ದಾರೆ ಎಂದು ರಾಷ್ಟ್ರಪತಿ ಮುರ್ಮು ಹೇಳಿದ್ದಾರೆ. ಸಾಂಸ್ಕೃತಿಕ ಪರಂಪರೆಯ ಗೌರವವನ್ನು ಕಾಪಾಡಿಕೊಂಡೇ ಆಧುನಿಕ ಅಭಿವೃದ್ಧಿಯತ್ತ ಭಾರತ ಮುನ್ನಡೆಯುತ್ತಿದೆ ಎಂದು ಅವರು ಉಲ್ಲೇಖಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಇದೇ ರೀತಿಯಲ್ಲಿ ದೇಶದ ಸೇವೆಯನ್ನು ಮುಂದುವರಿಸಲು ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯವನ್ನು ಹೊಂದಲಿ ಎಂದು ರಾಷ್ಟ್ರಪತಿ ಹಾರೈಸಿದ್ದಾರೆ.
ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ಭಾರತ ಜಾಗತಿಕ ಮಟ್ಟದಲ್ಲಿ ಪ್ರಮುಖ ಸ್ಥಾನವನ್ನು ಪಡೆದುಕೊಳ್ಳುತ್ತಿದೆ ಎಂದು ತಮ್ಮ ಸಂದೇಶದಲ್ಲಿ ಹೇಳಿದ್ದಾರೆ. ದೇಶದ ಆರ್ಥಿಕತೆ, ಡಿಜಿಟಲ್ ಕ್ಷೇತ್ರ, ಬಾಹ್ಯಾಕಾಶ, ತಂತ್ರಜ್ಞಾನ, ಆರೋಗ್ಯ, ಮೂಲಸೌಕರ್ಯ ಹಾಗೂ ಉತ್ಪಾದನಾ ವಲಯಗಳಲ್ಲಿ ಗಮನಾರ್ಹ ಬೆಳವಣಿಗೆ ಕಂಡುಬಂದಿದೆ ಎಂದು ಅವರು ಉಲ್ಲೇಖಿಸಿದ್ದಾರೆ.
ಡಿಜಿಟಲ್ ಕ್ರಾಂತಿಯು ಕೋಟ್ಯಂತರ ಜನರಿಗೆ ಹೊಸ ಅವಕಾಶಗಳನ್ನು ಕಲ್ಪಿಸಿದೆ ಮತ್ತು 25 ಕೋಟಿಗೂ ಹೆಚ್ಚು ಭಾರತೀಯರು ತೀವ್ರ ಬಡತನದಿಂದ ಹೊರಬಂದಿದ್ದಾರೆ ಎಂಬುದನ್ನೂ ಉಪರಾಷ್ಟ್ರಪತಿ ತಮ್ಮ ಸಂದೇಶದಲ್ಲಿ ಪ್ರಸ್ತಾಪಿಸಿದ್ದಾರೆ.
ಇದೇ ವೇಳೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಅವರು ಕೂಡ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜನ್ಮದಿನದ ಶುಭಾಶಯಗಳನ್ನು ಸಲ್ಲಿಸಿದ್ದಾರೆ. ಸಾರ್ವಜನಿಕ ಸೇವೆಯತ್ತ ಪ್ರಧಾನಿಯವರ ಬದ್ಧತೆ ಮತ್ತು ಸಮರ್ಪಣೆ ಎಲ್ಲರಿಗೂ ಸ್ಫೂರ್ತಿದಾಯಕವಾಗಿದೆ ಎಂದು ಅವರು ಹೇಳಿದ್ದಾರೆ. ಪ್ರಧಾನಿ ಅವರಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಹಾಗೂ ದೇಶಸೇವೆಯನ್ನು ಮುಂದುವರಿಸಲು ಅಗತ್ಯವಾದ ಶಕ್ತಿ ದೊರೆಯಲಿ ಎಂದು ವೈಷ್ಣವ್ ಹಾರೈಸಿದ್ದಾರೆ.


