ಭಾರಿ ಮಳೆ ಎಫೆಕ್ಟ್: ಛತ್ತೀಸ್‌ಗಢದ ಎಲ್ಲ ಶಾಲೆಗಳಿಗೆ ಸೆ.26ರಂದು ರಜೆ

1 Min Read
1 Min Read

ರಾಯಪುರ: ಛತ್ತೀಸ್‌ಗಢದಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಹಲವು ಪ್ರದೇಶಗಳಲ್ಲಿ ಜಲಾವೃತ ಪರಿಸ್ಥಿತಿ ಉಂಟಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಸೆಪ್ಟೆಂಬರ್ 26ರಂದು ರಾಜ್ಯದ ಎಲ್ಲ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿ ವಿಷ್ಣು ದೇವ್ ಸಾಯ್ ಈ ನಿರ್ಧಾರ ಕೈಗೊಂಡಿದ್ದಾರೆ.

ನಿರಂತರ ಮಳೆಯ ಪರಿಣಾಮ ರಾಜ್ಯದ ಪ್ರಮುಖ ನದಿಗಳಾದ ಇಂದ್ರಾವತಿ, ಮಹಾನದಿ ಮತ್ತು ಶಿವನಾಥ್ ನದಿಗಳ ನೀರಿನ ಮಟ್ಟದಲ್ಲಿ ಏರಿಕೆಯಾಗಿದೆ. ಕೆಲವು ನಗರಗಳು ಹಾಗೂ ಪಟ್ಟಣಗಳ ತಗ್ಗು ಪ್ರದೇಶಗಳಲ್ಲೂ ನೀರು ನಿಂತಿದ್ದು, ಜನಜೀವನದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಹಿನ್ನೆಲೆಯಲ್ಲಿ ಆಡಳಿತ ಎಚ್ಚರಿಕೆ ವಹಿಸಿದೆ.

ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮಳೆ ಮತ್ತು ಪ್ರವಾಹ ಪರಿಸ್ಥಿತಿಯನ್ನು ನಿರಂತರವಾಗಿ ಗಮನಿಸುವಂತೆ ಮುಖ್ಯಮಂತ್ರಿ ಸಾಯ್ ಅವರು ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. ಅಗತ್ಯವಿರುವ ಕಡೆಗಳಲ್ಲಿ ಪರಿಹಾರ ಹಾಗೂ ರಕ್ಷಣಾ ಕಾರ್ಯಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಅವರು ನಿರ್ದೇಶನ ನೀಡಿದ್ದಾರೆ.

ನದಿಗಳ ನೀರಿನ ಮಟ್ಟ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಅಥವಾ ಪ್ರವಾಹದ ಅಪಾಯ ಎದುರಾದರೆ ಸ್ಥಳೀಯ ಜನರಿಗೆ ಮುಂಚಿತವಾಗಿಯೇ ಎಚ್ಚರಿಕೆ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಅಗತ್ಯವಿದ್ದರೆ ಜನರ ಸ್ಥಳಾಂತರ

ಪ್ರವಾಹದ ಅಪಾಯ ಹೆಚ್ಚಿರುವ ಪ್ರದೇಶಗಳಲ್ಲಿ ಜನರ ಸುರಕ್ಷತೆಗೆ ಆದ್ಯತೆ ನೀಡುವಂತೆ ಮುಖ್ಯಮಂತ್ರಿ ಸೂಚಿಸಿದ್ದಾರೆ. ಪರಿಸ್ಥಿತಿ ಅಗತ್ಯಪಡಿಸಿದರೆ ತಗ್ಗು ಪ್ರದೇಶಗಳಲ್ಲಿರುವ ಜನರನ್ನು ತಕ್ಷಣವೇ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವಂತೆ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಲಾಗಿದೆ.

ಭಾರಿ ಮಳೆಯಿಂದ ಉಂಟಾಗಬಹುದಾದ ತುರ್ತು ಪರಿಸ್ಥಿತಿಯನ್ನು ಎದುರಿಸಲು ಜಿಲ್ಲಾಡಳಿತಗಳು ಸನ್ನದ್ಧವಾಗಿದ್ದು, ಪರಿಸ್ಥಿತಿಯ ಮೇಲೆ ನಿರಂತರ ನಿಗಾ ಇರಿಸಲಾಗಿದೆ.

Share This Article