ಏಷ್ಯನ್ ಗೇಮ್ಸ್ ಸಾಧಕರೊಂದಿಗೆ ಇಂದು ಪ್ರಧಾನಿ ಮೋದಿ ಸಂವಾದ

1 Min Read
1 Min Read

ನವದೆಹಲಿ: 2026ರ ಏಷ್ಯನ್ ಗೇಮ್ಸ್‌ನಲ್ಲಿ ಪಾಲ್ಗೊಂಡ ಭಾರತೀಯ ಕ್ರೀಡಾಪಟುಗಳ ತಂಡದೊಂದಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ ನವದೆಹಲಿಯಲ್ಲಿ ಸಂವಾದ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಜಪಾನ್‌ನ ಐಚಿ–ನಗೋಯಾದಲ್ಲಿ ನಡೆದ ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಪದಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದುಕೊಂಡಿದೆ. ಒಟ್ಟು 85 ಪದಕಗಳನ್ನು ಗೆದ್ದಿರುವ ಭಾರತ, 21 ಚಿನ್ನ, 27 ಬೆಳ್ಳಿ ಹಾಗೂ 37 ಕಂಚಿನ ಪದಕಗಳನ್ನು ತನ್ನದಾಗಿಸಿಕೊಂಡಿದೆ. ಇದರೊಂದಿಗೆ ಏಷ್ಯನ್ ಗೇಮ್ಸ್‌ನಲ್ಲಿ ಸತತ ಎರಡನೇ ಬಾರಿ ಅಗ್ರ ಐದು ರಾಷ್ಟ್ರಗಳ ಪಟ್ಟಿಯಲ್ಲಿ ಸ್ಥಾನ ಪಡೆದ ಸಾಧನೆ ಮಾಡಿದೆ.

ವಿವಿಧ ಕ್ರೀಡಾ ವಿಭಾಗಗಳಲ್ಲಿ ಭಾರತೀಯ ಆಟಗಾರರು ಗಮನಾರ್ಹ ಪ್ರದರ್ಶನ ನೀಡಿದ್ದಾರೆ. ರಿಕರ್ವ್ ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ, ಒಂದೇ ಆವೃತ್ತಿಯಲ್ಲಿ ಪುರುಷರ ಮತ್ತು ಮಹಿಳೆಯರ ಹಾಕಿ ತಂಡಗಳಿಗೆ ಚಿನ್ನದ ಪದಕ ಹಾಗೂ ಸಾಫ್ಟ್ ಟೆನಿಸ್ ಮತ್ತು ಮಿಶ್ರ ಸಮರ ಕಲೆಗಳಲ್ಲಿ (MMA) ಮೊದಲ ಪದಕಗಳನ್ನು ಗೆದ್ದಿರುವುದು ಭಾರತದ ಪ್ರಮುಖ ಸಾಧನೆಗಳಲ್ಲಿ ಸೇರಿವೆ.

ಮಹಿಳೆಯರ ಟ್ರ್ಯಾಪ್ ವಿಭಾಗದಲ್ಲಿ ಭಾರತ ಮೊದಲ ಬಾರಿಗೆ ಚಿನ್ನದ ಪದಕ ಗೆದ್ದಿದೆ. ವೇಟ್‌ಲಿಫ್ಟಿಂಗ್‌ನಲ್ಲಿ 28 ವರ್ಷಗಳ ಬಳಿಕ ಏಷ್ಯನ್ ಗೇಮ್ಸ್‌ನಲ್ಲಿ ಬೆಳ್ಳಿ ಪದಕ ಲಭಿಸಿದ್ದು, ಗ್ರೀಕೋ–ರೋಮನ್ ಕುಸ್ತಿಯಲ್ಲಿ 64 ವರ್ಷಗಳ ನಂತರ ಭಾರತೀಯ ಸ್ಪರ್ಧಿಯೊಬ್ಬರು ಫೈನಲ್ ತಲುಪಿ ಬೆಳ್ಳಿ ಪದಕ ಗೆದ್ದಿರುವುದು ಮತ್ತೊಂದು ಮಹತ್ವದ ಸಾಧನೆಯಾಗಿದೆ.

ವಿವಿಧ ಕ್ರೀಡಾ ವಿಭಾಗಗಳಲ್ಲಿ ಭಾರತೀಯ ಕ್ರೀಡಾಪಟುಗಳು ತೋರಿದ ಪ್ರದರ್ಶನವು ದೇಶದ ಕ್ರೀಡಾ ಸಾಮರ್ಥ್ಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚುತ್ತಿರುವ ಸ್ಪರ್ಧಾತ್ಮಕತೆಯನ್ನು ಪ್ರತಿಬಿಂಬಿಸಿದೆ. ಕ್ರೀಡಾಪಟುಗಳ ಸಾಧನೆಯನ್ನು ಗುರುತಿಸುವ ಉದ್ದೇಶದಿಂದ ಪ್ರಧಾನಿ ಮೋದಿ ಅವರೊಂದಿಗೆ ಸಂವಾದ ನಡೆಸಲಿದ್ದಾರೆ.

Share This Article