ಪ್ರಧಾನಿ ನರೇಂದ್ರ ಮೋದಿ ಅವರು ಡಿಸೆಂಬರ್ 11 ಮತ್ತು 12ರಂದು ಕೆನಡಾಕ್ಕೆ ಭೇಟಿ ನೀಡಲಿದ್ದಾರೆ. ಕೆನಡಾದ ಒಟ್ಟಾವಾದಲ್ಲಿರುವ ಭಾರತೀಯ ಹೈಕಮಿಷನ್ ಸಾಮಾಜಿಕ ಮಾಧ್ಯಮದ ಮೂಲಕ ಈ ಮಾಹಿತಿಯನ್ನು ಪ್ರಕಟಿಸಿದೆ.
ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದರು. ಈ ಸಂದರ್ಭದಲ್ಲಿ ಉಭಯ ನಾಯಕರು ಭಾರತ–ಕೆನಡಾ ನಡುವಿನ ಸಂಬಂಧಗಳಲ್ಲಿ ಕಂಡುಬಂದಿರುವ ಸಕಾರಾತ್ಮಕ ಬೆಳವಣಿಗೆಗಳನ್ನು ಮುಂದುವರಿಸಲು ಹಾಗೂ ಎರಡೂ ದೇಶಗಳ ನಡುವಿನ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಒಪ್ಪಿಗೆ ಸೂಚಿಸಿದ್ದಾರೆ.
ವ್ಯಾಪಾರ, ಇಂಧನ, ತಂತ್ರಜ್ಞಾನ, ಭದ್ರತೆ ಮತ್ತು ಜನರ ನಡುವಿನ ಸಂಪರ್ಕ ಸೇರಿದಂತೆ ಪ್ರಮುಖ ಕ್ಷೇತ್ರಗಳಲ್ಲಿ ಸಹಕಾರವನ್ನು ವಿಸ್ತರಿಸುವುದರ ಜೊತೆಗೆ, ಸ್ಪಷ್ಟ ಫಲಿತಾಂಶಗಳನ್ನು ಸಾಧಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವ ಬಗ್ಗೆಯೂ ನಾಯಕರು ಚರ್ಚಿಸಿದ್ದಾರೆ.
ಪ್ರಧಾನಿ ಮೋದಿ ಅವರ ಈ ಭೇಟಿಯು ಭಾರತ ಮತ್ತು ಕೆನಡಾ ನಡುವಿನ ರಾಜತಾಂತ್ರಿಕ ಹಾಗೂ ಆರ್ಥಿಕ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುವ ನಿರೀಕ್ಷೆ ಮೂಡಿಸಿದೆ. ಭೇಟಿಯ ಸಂದರ್ಭದಲ್ಲಿ ಕೈಗೊಳ್ಳಲಿರುವ ನಿರ್ದಿಷ್ಟ ನಿರ್ಧಾರಗಳು ಮತ್ತು ಒಪ್ಪಂದಗಳ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.


