ಮಹರ್ಷಿ ವಾಲ್ಮೀಕಿ ಜಯಂತಿಯ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹಂಚಿಕೊಂಡಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು, ಮಹರ್ಷಿ ವಾಲ್ಮೀಕಿ ರಚಿಸಿದ ಮಹಾಕಾವ್ಯ ರಾಮಾಯಣವು ಕರ್ತವ್ಯನಿಷ್ಠೆ, ಸದಾಚಾರ, ನಿಸ್ವಾರ್ಥ ಸೇವೆ, ಪರೋಪಕಾರ, ಸ್ನೇಹ, ತ್ಯಾಗ, ಧರ್ಮನಿಷ್ಠೆ ಮತ್ತು ಭಕ್ತಿಯಂತಹ ಮೌಲ್ಯಗಳನ್ನು ಪ್ರತಿಯೊಬ್ಬರಿಗೂ ತಿಳಿಸುತ್ತದೆ ಎಂದು ಹೇಳಿದ್ದಾರೆ.
ರಾಮಾಯಣದಲ್ಲಿರುವ ಶಾಶ್ವತ ಮೌಲ್ಯಗಳು ಜನರ ಜೀವನದ ಮೇಲೆ ಅಳಿಸಲಾಗದ ಪ್ರಭಾವ ಬೀರುತ್ತವೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ರಾಮಾಯಣದಲ್ಲಿ ವಿವರಿಸಿರುವ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಪ್ರತಿಯೊಬ್ಬರೂ ವೈಯಕ್ತಿಕ ಹಾಗೂ ಸಾಮಾಜಿಕ ಬದುಕಿನಲ್ಲಿ ಪ್ರಗತಿಯ ಹಾದಿಯಲ್ಲಿ ಮುನ್ನಡೆಯಲಿ ಎಂದು ರಾಷ್ಟ್ರಪತಿ ಹಾರೈಸಿದ್ದಾರೆ.
ಭಾರತೀಯ ಸಂಸ್ಕೃತಿಯ ಬುನಾದಿ ವಾಲ್ಮೀಕಿಯ ಚಿಂತನೆಗಳು: ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರೂ ಮಹರ್ಷಿ ವಾಲ್ಮೀಕಿ ಜಯಂತಿಯ ಶುಭ ಸಂದರ್ಭದಲ್ಲಿ ದೇಶದ ಜನತೆಗೆ ಶುಭಾಶಯಗಳನ್ನು ತಿಳಿಸಿದ್ದಾರೆ.
ಮಹರ್ಷಿ ವಾಲ್ಮೀಕಿಯ ಉದಾತ್ತ ಚಿಂತನೆಗಳು ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯ ಪ್ರಮುಖ ಆಧಾರಸ್ತಂಭಗಳಾಗಿವೆ ಎಂದು ಪ್ರಧಾನಿ ಹೇಳಿದ್ದಾರೆ. ಈ ಮೌಲ್ಯಗಳು ಪ್ರತಿ ಯುಗದಲ್ಲಿಯೂ ದೇಶದ ಪ್ರಗತಿಗೆ ಪ್ರೇರಣೆ ನೀಡುತ್ತಾ ಮುಂದುವರಿಯಲಿವೆ ಎಂದು ಅವರು ತಿಳಿಸಿದ್ದಾರೆ.
ಮಾನವಕುಲಕ್ಕೆ ಮಹರ್ಷಿ ವಾಲ್ಮೀಕಿ ನೀಡಿದ ಅಮೂಲ್ಯ ಸಂದೇಶಗಳು ಸದಾಕಾಲ ಜನರಿಗೆ ಮಾರ್ಗದರ್ಶನ ನೀಡುವ ದೀಪಗಳಾಗಿ ಉಳಿಯಲಿವೆ ಎಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಸಂದೇಶದಲ್ಲಿ ಹೇಳಿದ್ದಾರೆ.


