ಮುಂಬೈ: ಮುಂಬೈ ಸೇರಿದಂತೆ ಕರಾವಳಿ ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ ಹಾಗೂ ಬಿರುಗಾಳಿ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ರಾಯಗಡ ಜಿಲ್ಲೆಗೆ ಭಾರತೀಯ ಹವಾಮಾನ ಇಲಾಖೆ (IMD) ರೆಡ್ ಅಲರ್ಟ್ ಘೋಷಿಸಿದ್ದು, ಪ್ರಮುಖ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿವೆ. ರಾಯಗಡ ಮತ್ತು ರತ್ನಗಿರಿ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.
ಮುಂಬೈನಲ್ಲಿ ಕಟ್ಟಡ ಕುಸಿತ; 6 ಮಂದಿ ಸಾವು
ಮುಂಬೈನ ಮಾನ್ಖುರ್ಡ್ ಪ್ರದೇಶದಲ್ಲಿ ಮೂರು ಅಂತಸ್ತಿನ ಕಚ್ಚಾ ಕಟ್ಟಡ ಕುಸಿದ ಪರಿಣಾಮ ಐವರು ಮಕ್ಕಳು ಹಾಗೂ ಓರ್ವ ಮಹಿಳೆ ಸೇರಿ ಒಟ್ಟು 6 ಮಂದಿ ಮೃತಪಟ್ಟಿದ್ದಾರೆ. ಇದೇ ವೇಳೆ ಬಿರುಗಾಳಿಯಿಂದ ಗಂಟೆಗೆ 72ರಿಂದ 75 ಕಿ.ಮೀ. ವೇಗದಲ್ಲಿ ಗಾಳಿ ಬೀಸಿದ್ದು, ನಗರದಲ್ಲಿ 142ಕ್ಕೂ ಹೆಚ್ಚು ಮರಗಳು ಹಾಗೂ ಕೊಂಬೆಗಳು ನೆಲಕ್ಕುರುಳಿದ ಘಟನೆಗಳು ವರದಿಯಾಗಿವೆ. ಈ ಅವಘಡಗಳಲ್ಲಿ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.
ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
ಸೋಮವಾರದಂದು ಮುಂಬೈ, ಠಾಣೆ, ಪಾಲ್ಘರ್, ರತ್ನಗಿರಿ ಮತ್ತು ಸಿಂಧುದುರ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಭಾರೀ ಮಳೆಯೊಂದಿಗೆ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಶಾಲೆ-ಕಾಲೇಜುಗಳಿಗೆ ರಜೆ
ಭಾರೀ ಮಳೆಯ ಮುನ್ನೆಚ್ಚರಿಕಾ ಕ್ರಮವಾಗಿ ಕರಾವಳಿ ಮಹಾರಾಷ್ಟ್ರದ ಎಲ್ಲಾ ಜಿಲ್ಲೆಗಳು ಹಾಗೂ ಪುಣೆ ಜಿಲ್ಲೆಯ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆ-ಕಾಲೇಜುಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ.
ಪ್ರವಾಹದಿಂದ ಜನಜೀವನ ಅಸ್ತವ್ಯಸ್ತ
ರಾಯಗಡ ಜಿಲ್ಲೆಯಲ್ಲಿ ಕಳೆದ ಐದು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಅಂಬಾ, ಕುಂಡಲಿಕಾ, ಸಾವಿತ್ರಿ ಹಾಗೂ ಪಾತಾಳಗಂಗಾ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿವೆ. ಇದರಿಂದ ಹಲವು ವಸತಿ ಪ್ರದೇಶಗಳು ಜಲಾವೃತಗೊಂಡಿವೆ.
ರತ್ನಗಿರಿ ಜಿಲ್ಲೆಯ ಅನೇಕ ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಸಿಂಧುದುರ್ಗ ಜಿಲ್ಲೆಯಲ್ಲಿ ಹಲವು ಕಟ್ಟಡಗಳು ಹಾನಿಗೊಳಗಾಗಿವೆ. ಅಲ್ಲದೆ 70 ಗ್ರಾಮಗಳ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, 30 ಸಾವಿರಕ್ಕೂ ಹೆಚ್ಚು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಆಡಳಿತವು ರಕ್ಷಣಾ ಹಾಗೂ ಪರಿಹಾರ ಕಾರ್ಯಗಳನ್ನು ತೀವ್ರಗೊಳಿಸಿದ್ದು, ಜನರು ಅಗತ್ಯವಿಲ್ಲದೆ ಹೊರಗೆ ತೆರಳದಂತೆ ಹಾಗೂ ಹವಾಮಾನ ಇಲಾಖೆಯ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮನವಿ ಮಾಡಿದೆ.


