ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಮತ್ತಷ್ಟು ತೀವ್ರಗೊಂಡಿದ್ದು, ಅಮೆರಿಕ ಸೇನೆ ಇರಾನ್ ವಿರುದ್ಧ ಹೊಸ ವೈಮಾನಿಕ ದಾಳಿಗಳನ್ನು ನಡೆಸಿದೆ. ಜೋರ್ಡನ್‌ನಲ್ಲಿ ಅಮೆರಿಕದ ಸೇನಾ ನೆಲೆಯ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಅಮೆರಿಕನ್ ಸೈನಿಕರು ಮೃತಪಟ್ಟಿದ್ದು, ಒಬ್ಬರು ನಾಪತ್ತೆಯಾಗಿದ್ದಾರೆ ಹಾಗೂ ನಾಲ್ವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಅಮೆರಿಕದ ಸೆಂಟ್ರಲ್ ಕಮಾಂಡ್ (CENTCOM) ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ಹೋರ್ಮುಜ್ ಜಲಸಂಧಿಯ ಮೂಲಕ ಸಾಗುವ ತೈಲ ಟ್ಯಾಂಕರ್‌ಗಳ ಸಂಚಾರಕ್ಕೆ ಅಡ್ಡಿಪಡಿಸುವ ಇರಾನ್‌ನ ಸಾಮರ್ಥ್ಯವನ್ನು ದುರ್ಬಲಗೊಳಿಸುವ ಉದ್ದೇಶದಿಂದ ಈ ವೈಮಾನಿಕ ದಾಳಿಗಳನ್ನು ನಡೆಸಲಾಗಿದೆ.
ಜಾಗತಿಕ ಮಟ್ಟದಲ್ಲಿ ಸಾಗಾಟವಾಗುವ ಕಚ್ಚಾ ತೈಲದ ಸುಮಾರು ಶೇ.20ರಷ್ಟು ಪ್ರಮಾಣ ಹೋರ್ಮುಜ್ ಜಲಸಂಧಿಯ ಮೂಲಕವೇ ಸಾಗುತ್ತದೆ. ಆದ್ದರಿಂದ ಈ ಪ್ರದೇಶದ ಬೆಳವಣಿಗೆಗಳು ಜಾಗತಿಕ ಇಂಧನ ಮಾರುಕಟ್ಟೆಯ ಮೇಲೂ ಮಹತ್ವದ ಪರಿಣಾಮ ಬೀರುವ ಸಾಧ್ಯತೆ ಇದೆ.
ಶುಕ್ರವಾರ ಜೋರ್ಡನ್‌ನಲ್ಲಿರುವ ಅಮೆರಿಕದ ಸೇನಾ ನೆಲೆಯ ಮೇಲೆ ಡ್ರೋನ್ ಮತ್ತು ಕ್ಷಿಪಣಿ ದಾಳಿ ನಡೆದ ಬಳಿಕ, ಯುದ್ಧ ಆರಂಭವಾದ ನಂತರ ನೇರವಾಗಿ ಇರಾನ್ ಬೆಂಬಲಿತ ದಾಳಿಯಲ್ಲಿ ಅಮೆರಿಕದ ಸೈನಿಕರು ಸಾವನ್ನಪ್ಪಿದ ಮೊದಲ ಘಟನೆ ಎಂದು ಅಮೆರಿಕ ಸೇನೆ ತಿಳಿಸಿತ್ತು. ಅದರ ಬೆನ್ನಲ್ಲೇ ಈ ಹೊಸ ವೈಮಾನಿಕ ದಾಳಿಗಳನ್ನು ನಡೆಸಲಾಗಿದೆ.


