ನವದೆಹಲಿ: ಮಹಿಳೆಯರ ಹಕ್ಕುಗಳ ರಕ್ಷಣೆ, ಸಬಲೀಕರಣ ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ಕಲ್ಯಾಣವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ದೆಹಲಿ ಸರ್ಕಾರ ದೆಹಲಿ ಮಹಿಳಾ ಆಯೋಗ ಮತ್ತು ದೆಹಲಿ ಅಲ್ಪಸಂಖ್ಯಾತರ ಆಯೋಗಗಳನ್ನು ರಚಿಸಿದೆ.
ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆಯಾಗಿ ಲತಾ ಗುಪ್ತಾ ಅವರನ್ನು ನೇಮಕ ಮಾಡಲಾಗಿದೆ. ಆಯೋಗದ ಸದಸ್ಯರಾಗಿ ಶ್ಯಾಮ್ ಬಾಲಾ, ಮಾಲ್ತಿ ವರ್ಮಾ, ಲತಾ ಸೋಧಿ, ಸಾನ್ರಿಕಾ ಶರ್ಮಾ ಝಾ ಹಾಗೂ ರೇಣು ಭಲ್ಲಾ ಅವರನ್ನು ನೇಮಿಸಲಾಗಿದೆ.
ಇದೇ ವೇಳೆ, ದೆಹಲಿ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾಗಿ ನಿರ್ಮಲ್ ಜೈನ್ ಅವರನ್ನು ನೇಮಕ ಮಾಡಲಾಗಿದ್ದು, ಕುಲದೀಪ್ ಸಿಂಗ್ ಮತ್ತು ಮೊಹಮ್ಮದ್ ಹಾರೂನ್ ಸದಸ್ಯರಾಗಿ ಕಾರ್ಯನಿರ್ವಹಿಸಲಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ, ಮಹಿಳೆಯರ ಹಕ್ಕುಗಳ ರಕ್ಷಣೆ, ಅವರ ಸಬಲೀಕರಣ, ಅಲ್ಪಸಂಖ್ಯಾತ ಸಮುದಾಯಗಳ ಕಲ್ಯಾಣ ಹಾಗೂ ಅವರಿಗೆ ಸಂವಿಧಾನಬದ್ಧವಾಗಿ ದೊರೆತಿರುವ ಹಕ್ಕುಗಳ ಸಂರಕ್ಷಣೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಉದ್ದೇಶದಿಂದ ಈ ಎರಡು ಆಯೋಗಗಳನ್ನು ರಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಈ ಕ್ರಮವು ಮಹಿಳೆಯರು ಮತ್ತು ಅಲ್ಪಸಂಖ್ಯಾತ ಸಮುದಾಯಗಳ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ ನೀಡುವ ಜೊತೆಗೆ ಅವರ ಹಕ್ಕುಗಳ ರಕ್ಷಣೆಗೆ ಸಂಸ್ಥಾತ್ಮಕ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲಿದೆ ಎಂದು ಸರ್ಕಾರ ವಿಶ್ವಾಸ ವ್ಯಕ್ತಪಡಿಸಿದೆ.


