ಕೋಲ್ಕತ್ತಾ: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದ ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳ ವಿರುದ್ಧ ಬಲವಂತದ ಅಥವಾ ಕಠಿಣ ಕ್ರಮಗಳನ್ನು ಕೈಗೊಳ್ಳುವುದಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಘೋಷಿಸಿದೆ.
ಸುಪ್ರೀಂ ಕೋರ್ಟ್‌ನ ನಿರ್ದೇಶನ ಹಾಗೂ ನೀಟ್ ಪ್ರಶ್ನೆಪತ್ರಿಕೆ ಸೋರಿಕೆಗೆ ಸಂಬಂಧಿಸಿದ ಪ್ರತಿಭಟನೆಗಳ ಎಲ್ಲಾ ಆಯಾಮಗಳನ್ನು ಪರಿಶೀಲಿಸಿದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.
ಆದರೆ, ಅಪರಾಧ ಹಿನ್ನೆಲೆ ಹೊಂದಿರುವ ವ್ಯಕ್ತಿಗಳ ವಿರುದ್ಧ ಕಾನೂನು ಪ್ರಕಾರ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ರಾಜ್ಯ ಸರ್ಕಾರ, ನೀಟ್ ಪ್ರತಿಭಟನೆಗೆ ಸಂಬಂಧಿಸಿದಂತೆ ಇದುವರೆಗೆ 16 ಮಂದಿಯನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದೆ.
ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದ್ದು, ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟು ಮಾಡಿದ ಅಥವಾ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗಿರುವವರ ವಿರುದ್ಧ ಮಾತ್ರ ಕ್ರಮ ಮುಂದುವರಿಯಲಿದೆ ಎಂದು ಸರ್ಕಾರ ಹೇಳಿದೆ.


