ಮುಂಬೈ: ಮಹಾರಾಷ್ಟ್ರದ ಠಾಣೆ ಜಿಲ್ಲೆಯ ಭಿವಂಡಿ ಪಟ್ಟಣದಲ್ಲಿ ಶುಕ್ರವಾರ ತಡರಾತ್ರಿ ನಾಲ್ಕು ಅಂತಸ್ತಿನ ಕೋಹಿನೂರ್ ಕಟ್ಟಡ ಕುಸಿದ ಪರಿಣಾಮ ಕನಿಷ್ಠ 9 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಅವಶೇಷಗಳಡಿ ಸಿಲುಕಿರುವವರನ್ನು ರಕ್ಷಿಸಲು ಅಗ್ನಿಶಾಮಕ ದಳ, ಪೊಲೀಸ್ ಹಾಗೂ ಸ್ಥಳೀಯ ಆಡಳಿತದ ಸಿಬ್ಬಂದಿ ಯುದ್ಧೋಪಾದಿಯಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ರಾಜ್ಯದ ವಿಪತ್ತು ನಿರ್ವಹಣಾ ಸಚಿವ ಗಿರೀಶ್ ಮಹಾಜನ್ ಇಂದು ಬೆಳಗ್ಗೆ ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆಯ ಪರಿಶೀಲನೆ ನಡೆಸಿದರು. ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ₹5 ಲಕ್ಷ ಪರಿಹಾರ ನೀಡಲಾಗುವುದು ಎಂದು ಅವರು ಘೋಷಿಸಿದರು.
ದುರಂತಕ್ಕೆ ಸಂಬಂಧಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಮೃತಪಟ್ಟ ಪ್ರತಿಯೊಬ್ಬರ ಕುಟುಂಬದವರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ₹2 ಲಕ್ಷ ಪರಿಹಾರ ಹಾಗೂ ಗಾಯಾಳುಗಳಿಗೆ ₹50 ಸಾವಿರ ಆರ್ಥಿಕ ನೆರವು ನೀಡುವುದಾಗಿ ಘೋಷಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಸ್ಥಳೀಯ ನಗರಾಡಳಿತ ಈ ಕಟ್ಟಡವನ್ನು ಈಗಾಗಲೇ ಶಿಥಿಲಾವಸ್ಥೆಯ ಕಟ್ಟಡ ಎಂದು ಘೋಷಿಸಿತ್ತು ಎಂದು ತಿಳಿಸಿದ್ದಾರೆ.
ಕೆಲ ಕುಟುಂಬಗಳು ಕಟ್ಟಡವನ್ನು ಈಗಾಗಲೇ ಖಾಲಿ ಮಾಡಿದ್ದರೂ, ಕೆಲವರು ಸ್ಥಳಾಂತರಗೊಳ್ಳಲು ನಿರಾಕರಿಸಿದ್ದರು ಎಂದು ಅವರು ಹೇಳಿದರು.
“ಜೀವ ಅಮೂಲ್ಯವಾಗಿದೆ. ಸ್ಥಳೀಯ ಆಡಳಿತ ನೀಡುವ ಸುರಕ್ಷತಾ ಸೂಚನೆಗಳನ್ನು ನಾಗರಿಕರು ಕಡ್ಡಾಯವಾಗಿ ಪಾಲಿಸಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳಬೇಕು” ಎಂದು ಮುಖ್ಯಮಂತ್ರಿ ಮನವಿ ಮಾಡಿದರು.
ಭಾಗಶಃ ಜನರು ವಾಸಿಸುತ್ತಿದ್ದ ಕಟ್ಟಡದಲ್ಲಿ ದುರಸ್ತಿ ಕಾಮಗಾರಿ ಮುಂದುವರಿಸಿದ ಗುತ್ತಿಗೆದಾರನ ವಿರುದ್ಧ ಎಫ್ಐಆರ್ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ತಿಳಿಸಿದ್ದಾರೆ.


