ನವದೆಹಲಿ: ದೇಶದ ಹಲವು ರಾಜ್ಯಗಳಲ್ಲಿ ಮುಂಗಾರು ಮಳೆ ಮುಂದುವರಿದಿರುವ ನಡುವೆಯೇ ರಾಜಸ್ಥಾನ ಮತ್ತು ಪಶ್ಚಿಮ ಮಧ್ಯಪ್ರದೇಶದಲ್ಲಿ ಇಂದು ಭಾರಿ ಮಳೆಯಿಂದ ಅತಿ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (IMD) ರೆಡ್ ಅಲರ್ಟ್ ಘೋಷಿಸಿದೆ.
ಮುಂದಿನ ಎರಡು ದಿನಗಳಲ್ಲಿ ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ ಮತ್ತು ಪಶ್ಚಿಮ ಉತ್ತರ ಪ್ರದೇಶದಲ್ಲೂ ಭಾರಿ ಮಳೆಯಿಂದ ಅತಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹಲವು ರಾಜ್ಯಗಳಲ್ಲಿ ಭಾರಿ ಮಳೆಯ ಎಚ್ಚರಿಕೆ
ಇಂದು ದೆಹಲಿ, ಹರಿಯಾಣ, ಚಂಡೀಗಢ, ಪಂಜಾಬ್, ಛತ್ತೀಸ್ಗಢ, ಕರಾವಳಿ ಆಂಧ್ರ ಪ್ರದೇಶ, ಪೂರ್ವ ಮಧ್ಯಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಮಧ್ಯ ಮಹಾರಾಷ್ಟ್ರ, ಒಡಿಶಾ ಹಾಗೂ ಪಶ್ಚಿಮ ರಾಜಸ್ಥಾನದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು IMD ತಿಳಿಸಿದೆ.
ಈಶಾನ್ಯ ಭಾರತದ ಹಲವು ಭಾಗಗಳಲ್ಲೂ ಇಂದು ಇದೇ ರೀತಿಯ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆಯಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಮುಂದಿನ 2ರಿಂದ 3 ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಹಲವು ರಾಜ್ಯಗಳಲ್ಲಿ ಗುಡುಗು, ಮಿಂಚು ಸಹಿತ ಮಳೆ
ಇದೇ ವೇಳೆ ಆಂಧ್ರ ಪ್ರದೇಶ, ಪೂರ್ವ ಉತ್ತರ ಪ್ರದೇಶ, ಜಾರ್ಖಂಡ್, ಕರ್ನಾಟಕ, ಕೇರಳ, ಮಾಹೆ, ತಮಿಳುನಾಡು, ಪುದುಚೇರಿ, ಕಾರೈಕಲ್ ಮತ್ತು ಬಿಹಾರದಲ್ಲಿ ಈ ತಿಂಗಳ 16ರವರೆಗೆ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಮುಂದಿನ ಎರಡು-ಮೂರು ದಿನಗಳಲ್ಲಿ ಲಕ್ಷದ್ವೀಪ, ಮಧ್ಯಪ್ರದೇಶ, ಒಡಿಶಾ, ತೆಲಂಗಾಣ, ಪಶ್ಚಿಮ ಬಂಗಾಳ, ಸಿಕ್ಕಿಂ, ಪಶ್ಚಿಮ ರಾಜಸ್ಥಾನ, ಪಶ್ಚಿಮ ಉತ್ತರ ಪ್ರದೇಶ, ಛತ್ತೀಸ್ಗಢ ಮತ್ತು ಉತ್ತರಾಖಂಡದಲ್ಲೂ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಭಾರಿ ಮಳೆ ಹಾಗೂ ಗುಡುಗು-ಮಿಂಚಿನ ಮುನ್ಸೂಚನೆ ಇರುವ ಪ್ರದೇಶಗಳ ಜನರು ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.


