ನವದೆಹಲಿ: ಛತ್ತೀಸ್‌ಗಢದಲ್ಲಿ ಇಂದು ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (IMD) ರೆಡ್ ಅಲರ್ಟ್ ಘೋಷಿಸಿದೆ. ರಾಜ್ಯದ ಹಲವು ಭಾಗಗಳಲ್ಲಿ ಅತಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
ಇದೇ ವೇಳೆ ಗಂಗಾ ಬಯಲು ಪ್ರದೇಶದ ಪಶ್ಚಿಮ ಬಂಗಾಳ, ಹಿಮಾಚಲ ಪ್ರದೇಶ, ಜಾರ್ಖಂಡ್, ಒಡಿಶಾ ಹಾಗೂ ಉತ್ತರಾಖಂಡದಲ್ಲಿ ಭಾರಿ ಮಳೆಯಿಂದ ಅತಿ ಭಾರಿ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ IMD ಆರೆಂಜ್ ಅಲರ್ಟ್ ನೀಡಿದೆ.
ಈಶಾನ್ಯ ಭಾರತದ ಹಲವು ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ತಮಿಳುನಾಡು, ಪುದುಚೇರಿ ಹಾಗೂ ಕಾರೈಕಾಲ್‌ನಲ್ಲಿಯೂ ಇದೇ ರೀತಿಯ ಹವಾಮಾನ ಪರಿಸ್ಥಿತಿ ಮುಂದುವರಿಯುವ ನಿರೀಕ್ಷೆಯಿದೆ.
ಜಮ್ಮು-ಕಾಶ್ಮೀರ, ಲಡಾಖ್, ಗಿಲ್ಗಿಟ್-ಬಾಲ್ಟಿಸ್ತಾನ್, ಮುಜಫರಾಬಾದ್, ಕೇರಳ, ಮಾಹೆ, ಮಧ್ಯಪ್ರದೇಶ, ಉಪ-ಹಿಮಾಲಯ ಪಶ್ಚಿಮ ಬಂಗಾಳ ಹಾಗೂ ಸಿಕ್ಕಿಂನಲ್ಲಿಯೂ ಭಾರಿ ಮಳೆಯಾಗುವ ಸಾಧ್ಯತೆಯನ್ನು ಹವಾಮಾನ ಇಲಾಖೆ ತಿಳಿಸಿದೆ.
ಇದಲ್ಲದೆ, ದೆಹಲಿ, ಪೂರ್ವ ರಾಜಸ್ಥಾನ, ಹರಿಯಾಣ, ಚಂಡೀಗಢ, ಕೊಂಕಣ, ಗೋವಾ, ಮಧ್ಯ ಮಹಾರಾಷ್ಟ್ರ ಮತ್ತು ಪಂಜಾಬ್‌ನಲ್ಲಿಯೂ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ.
ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಆಂಧ್ರಪ್ರದೇಶ, ಗಂಗಾ ಬಯಲು ಪ್ರದೇಶದ ಪಶ್ಚಿಮ ಬಂಗಾಳ ಹಾಗೂ ಒಳನಾಡು ಕರ್ನಾಟಕದಲ್ಲಿಯೂ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು IMD ತಿಳಿಸಿದೆ.
ಭಾರಿ ಮಳೆಯ ಮುನ್ಸೂಚನೆ ಇರುವ ಪ್ರದೇಶಗಳ ಜನರು ಸ್ಥಳೀಯ ಆಡಳಿತ ಮತ್ತು ಹವಾಮಾನ ಇಲಾಖೆಯ ಮುನ್ನೆಚ್ಚರಿಕೆಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ.


