ವಿಶ್ವಸಂಸ್ಥೆ: ನೇಪಾಳ ಮತ್ತು ಟಿಬೆಟ್‌ನಲ್ಲಿ ಸಂಭವಿಸಿದ ಭೀಕರ ಹಠಾತ್ ಪ್ರವಾಹದಿಂದ ಉಂಟಾದ ಜೀವಹಾನಿ ಹಾಗೂ ಅಪಾರ ಹಾನಿಗೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಪ್ರವಾಹ ದುರಂತದಿಂದ ಮೃತಪಟ್ಟವರ ಕುಟುಂಬಗಳಿಗೆ ಗುಟೆರಸ್ ಅವರು ತಮ್ಮ ಆಳವಾದ ಸಂತಾಪ ಸೂಚಿಸಿದ್ದು, ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.
ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿಯ ವಕ್ತಾರ ಸ್ಟೆಫಾನ್ ಡುಜಾರಿಕ್ ಮಾತನಾಡಿ, ಪ್ರವಾಹದಿಂದ ತತ್ತರಿಸಿರುವ ಪ್ರದೇಶಗಳಲ್ಲಿ ಸರ್ಕಾರಗಳ ನೇತೃತ್ವದಲ್ಲಿ ನಡೆಯುತ್ತಿರುವ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳಿಗೆ ವಿಶ್ವಸಂಸ್ಥೆ ಬೆಂಬಲ ನೀಡುತ್ತಿದೆ ಎಂದು ತಿಳಿಸಿದ್ದಾರೆ.
ತುರ್ತು ನೆರವಿನ ಅಗತ್ಯವಿರುವವರಿಗೆ ಸಾಧ್ಯವಿರುವ ಎಲ್ಲ ರೀತಿಯ ಸಹಾಯ ಒದಗಿಸುವ ನಿಟ್ಟಿನಲ್ಲಿ ವಿಶ್ವಸಂಸ್ಥೆ ಸಂಬಂಧಿತ ಸರ್ಕಾರಗಳೊಂದಿಗೆ ಸಮನ್ವಯ ಸಾಧಿಸುತ್ತಿದೆ ಎಂದು ಅವರು ಹೇಳಿದರು.
ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿರುವ ಎಲ್ಲರೊಂದಿಗೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಒಗ್ಗಟ್ಟಿನಿಂದ ನಿಂತಿದ್ದಾರೆ ಎಂದು ಡುಜಾರಿಕ್ ತಿಳಿಸಿದರು.


