ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಸಾರ್ವಜನಿಕ ಸ್ವಚ್ಛತೆ ಮತ್ತು ನಾಗರಿಕ ಶಿಸ್ತು ಹೆಚ್ಚಿಸುವ ಉದ್ದೇಶದಿಂದ ರೂಪಿಸಲಾದ ಹೊಸ ಕಠಿಣ ನಾಗರಿಕ ನಿಯಮಗಳು ಇಂದಿನಿಂದ ಜಾರಿಗೆ ಬಂದಿವೆ.
ಹೊಸ ನಿಯಮಗಳ ಅಡಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದು, ಕಸ ಎಸೆಯುವುದು, ಸಾರ್ವಜನಿಕವಾಗಿ ಮೂತ್ರ ವಿಸರ್ಜನೆ ಮಾಡುವುದು ಹಾಗೂ ಬಯಲು ಶೌಚಕ್ಕೆ ದಂಡ ವಿಧಿಸಲಾಗುತ್ತದೆ. ನಿಷೇಧಿತ ಪ್ಲಾಸ್ಟಿಕ್ ಚೀಲಗಳ ಬಳಕೆ, ಅನಧಿಕೃತವಾಗಿ ತ್ಯಾಜ್ಯ ಸುರಿಯುವುದು ಮತ್ತು ಸಾರ್ವಜನಿಕ ರಸ್ತೆಗಳಲ್ಲಿ ನಿರ್ಮಾಣ ಸಾಮಗ್ರಿಗಳನ್ನು ಇಡುವುದಕ್ಕೂ ದಂಡದ ಕ್ರಮ ಕೈಗೊಳ್ಳಲಾಗುತ್ತದೆ.
ಇದರ ಜೊತೆಗೆ, ಅಕ್ರಮ ವಾಹನ ನಿಲುಗಡೆ ಹಾಗೂ ಸಾರ್ವಜನಿಕ ಸ್ಥಳಗಳ ಒತ್ತುವರಿಗೂ ಕಡಿವಾಣ ಹಾಕಲು ಹೊಸ ನಿಯಮಗಳಲ್ಲಿ ಅವಕಾಶ ಕಲ್ಪಿಸಲಾಗಿದೆ. ನಗರ ಪ್ರದೇಶಗಳಲ್ಲಿ ರಾತ್ರಿ ವೇಳೆ ರಸ್ತೆ ಬದಿಯಲ್ಲಿ ವಾಹನ ನಿಲುಗಡೆ ಮಾಡುವುದಕ್ಕೂ ಶುಲ್ಕ ವಿಧಿಸುವ ವ್ಯವಸ್ಥೆ ಜಾರಿಗೆ ಬರಲಿದೆ.
ಸಾರ್ವಜನಿಕ ಸ್ಥಳಗಳ ಸ್ವಚ್ಛತೆ, ನೈರ್ಮಲ್ಯ ಮತ್ತು ನಾಗರಿಕ ಶಿಸ್ತನ್ನು ಸುಧಾರಿಸುವುದು ಈ ನಿಯಮಗಳ ಪ್ರಮುಖ ಉದ್ದೇಶವಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.
ರಾಜ್ಯದ ನಗರಾಭಿವೃದ್ಧಿ ಮತ್ತು ಪುರಸಭೆ ವ್ಯವಹಾರಗಳ ಸಚಿವೆ ಅಗ್ನಿಮಿತ್ರಾ ಪಾಲ್ ಮಾತನಾಡಿ, ಸಾರ್ವಜನಿಕ ಸ್ಥಳಗಳನ್ನು ಹೆಚ್ಚು ಸ್ವಚ್ಛವಾಗಿಡುವುದು ಮತ್ತು ನಾಗರಿಕರಲ್ಲಿ ಹೆಚ್ಚಿನ ಶಿಸ್ತು ಬೆಳೆಸುವುದೇ ಈ ಕ್ರಮದ ಏಕೈಕ ಉದ್ದೇಶವಾಗಿದೆ ಎಂದು ಹೇಳಿದ್ದಾರೆ.
ಹೊಸ ನಿಯಮಗಳ ಪರಿಣಾಮಕಾರಿ ಜಾರಿಯ ಮೂಲಕ ನಗರ ಪ್ರದೇಶಗಳಲ್ಲಿ ಸ್ವಚ್ಛತೆ ಮತ್ತು ಸಾರ್ವಜನಿಕ ವ್ಯವಸ್ಥೆಯನ್ನು ಮತ್ತಷ್ಟು ಸುಧಾರಿಸಲು ಸರ್ಕಾರ ಮುಂದಾಗಿದೆ.


