ಭುವನೇಶ್ವರ: ಒಡಿಶಾದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (IMD) ಇಂದು ರೆಡ್ ಅಲರ್ಟ್ ಘೋಷಿಸಿದೆ. ರಾಜ್ಯದ ಹಲವು ಭಾಗಗಳಲ್ಲಿ ಭಾರಿ ಮಳೆಯಿಂದ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಕೆಲವೆಡೆ ಅತ್ಯಂತ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಇಲಾಖೆ ತಿಳಿಸಿದೆ.
ಮುಂದಿನ ಎರಡು ದಿನಗಳಲ್ಲಿ ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಗಂಗಾ ಬಯಲು ಪ್ರದೇಶದ ಪಶ್ಚಿಮ ಬಂಗಾಳ, ಬಿಹಾರ, ಜಾರ್ಖಂಡ್, ಛತ್ತೀಸ್‌ಗಢ, ಕೇರಳ, ಮಾಹೆ ಹಾಗೂ ಉತ್ತರಾಖಂಡದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು IMD ಮುನ್ಸೂಚನೆ ನೀಡಿದೆ.
ಇದೇ ವೇಳೆ ತಮಿಳುನಾಡು, ಪುದುಚೇರಿ, ಕಾರೈಕಲ್, ಆಂಧ್ರಪ್ರದೇಶ, ತೆಲಂಗಾಣ, ಉಪ-ಹಿಮಾಲಯ ಪಶ್ಚಿಮ ಬಂಗಾಳ ಹಾಗೂ ಸಿಕ್ಕಿಂನಲ್ಲಿ ಇದೇ ತಿಂಗಳ 15ರವರೆಗೆ ಗುಡುಗು-ಮಿಂಚು ಸಹಿತ ಬಿರುಗಾಳಿ ಬೀಸುವ ಸಾಧ್ಯತೆಯಿದೆ.
ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಅರುಣಾಚಲ ಪ್ರದೇಶ, ಪೂರ್ವ ಉತ್ತರ ಪ್ರದೇಶ ಹಾಗೂ ಮಧ್ಯಪ್ರದೇಶದಲ್ಲಿ ನಾಳೆಯವರೆಗೆ ಇದೇ ರೀತಿಯ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದರ ಜೊತೆಗೆ ಇಂದು ಕರಾವಳಿ ಆಂಧ್ರಪ್ರದೇಶದಲ್ಲಿ ಬಿಸಿ ಹಾಗೂ ಆರ್ದ್ರ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ ಎಂದು IMD ಮುನ್ಸೂಚನೆ ನೀಡಿದೆ.


