ನವದೆಹಲಿ: ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ನೇಮಕಗೊಂಡಿರುವ 51 ಸಾವಿರಕ್ಕೂ ಅಧಿಕ ಯುವಕರಿಗೆ ಪ್ರಧಾನಿ ನರೇಂದ್ರ ಮೋದಿ ಅವರು 20ನೇ ಉದ್ಯೋಗ ಮೇಳದಲ್ಲಿ ಇಂದು ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ಮಧ್ಯಾಹ್ನ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ಹೊಸದಾಗಿ ನೇಮಕಗೊಂಡ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳನ್ನು ಹಸ್ತಾಂತರಿಸುವುದರ ಜೊತೆಗೆ, ಆಯ್ಕೆಯಾದ ಅಭ್ಯರ್ಥಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ದೇಶದಾದ್ಯಂತ 45 ಸ್ಥಳಗಳಲ್ಲಿ ಏಕಕಾಲದಲ್ಲಿ ಉದ್ಯೋಗ ಮೇಳ ನಡೆಯಲಿದೆ. ಈ ಮೂಲಕ ವಿವಿಧ ಕೇಂದ್ರ ಸಚಿವಾಲಯಗಳು ಮತ್ತು ಇಲಾಖೆಗಳ ವ್ಯಾಪ್ತಿಯಲ್ಲಿ ಹೊಸ ನೇಮಕಾತಿಗಳು ನಡೆಯಲಿವೆ.
ಆದಾಯ ತೆರಿಗೆ ಇಲಾಖೆ, ರೈಲ್ವೆ ಸಚಿವಾಲಯ, ಗೃಹ ಸಚಿವಾಲಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ಹಣಕಾಸು ಸೇವೆಗಳ ಇಲಾಖೆ ಹಾಗೂ ರಕ್ಷಣಾ ಸಚಿವಾಲಯ ಸೇರಿದಂತೆ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಸಂಸ್ಥೆಗಳಿಗೆ ಹೊಸದಾಗಿ ಆಯ್ಕೆಯಾದ ಅಭ್ಯರ್ಥಿಗಳು ಸೇರ್ಪಡೆಯಾಗಲಿದ್ದಾರೆ.
12.75 ಲಕ್ಷಕ್ಕೂ ಅಧಿಕ ಯುವಕರಿಗೆ ನೇಮಕಾತಿ ಪತ್ರ
ಯುವಕರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದು ಹಾಗೂ ದೇಶದ ಅಭಿವೃದ್ಧಿ ಪ್ರಕ್ರಿಯೆಯಲ್ಲಿ ಅವರ ಹೆಚ್ಚಿನ ಪಾಲ್ಗೊಳ್ಳುವಿಕೆಗೆ ಅವಕಾಶ ಕಲ್ಪಿಸುವುದು ಸರ್ಕಾರದ ಪ್ರಮುಖ ಗಮನವಾಗಿದೆ ಎಂದು ಉದ್ಯೋಗ ಮೇಳದ ಉದ್ದೇಶವನ್ನು ವಿವರಿಸಲಾಗಿದೆ.
20ನೇ ಉದ್ಯೋಗ ಮೇಳದ ಮೂಲಕ ವಿವಿಧ ಕೇಂದ್ರ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಒಟ್ಟಾರೆಯಾಗಿ ಸುಮಾರು 12.75 ಲಕ್ಷ ಯುವಕರಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದಂತಾಗಲಿದೆ.
ಉದ್ಯೋಗ ಮೇಳದ ಮೂಲಕ ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ವೇಗಗೊಳಿಸುವ ಜೊತೆಗೆ, ಯುವಜನರಿಗೆ ಸರ್ಕಾರಿ ಸೇವೆಯಲ್ಲಿ ಅವಕಾಶ ಕಲ್ಪಿಸುವ ಪ್ರಯತ್ನ ಮುಂದುವರಿದಿದೆ.


