ಲಖನೌ: ಉತ್ತರ ಪ್ರದೇಶದಲ್ಲಿ ಕಳೆದ 24 ಗಂಟೆಗಳಿಂದ ಹಲವು ಪ್ರದೇಶಗಳಲ್ಲಿ ನಿರಂತರವಾಗಿ ಭಾರಿ ಮಳೆಯಾಗುತ್ತಿದ್ದು, ಜನಜೀವನದ ಮೇಲೆ ಪರಿಣಾಮ ಬೀರಿದೆ. ಹವಾಮಾನ ಇಲಾಖೆಯ ಎಚ್ಚರಿಕೆ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ 12ನೇ ತರಗತಿವರೆಗಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ರಾಜಧಾನಿ ಲಖನೌ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಿದ್ದು, ರಸ್ತೆ ಸಂಚಾರಕ್ಕೂ ಅಡ್ಡಿಯಾಗಿದೆ. ನಿರಂತರ ಮಳೆಯಿಂದ ಕೆಲವು ಪ್ರದೇಶಗಳಲ್ಲಿ ನೀರು ನಿಂತಿದ್ದು, ವಿವಿಧೆಡೆ ಮಳೆ ಸಂಬಂಧಿತ ಅವಘಡಗಳ ವರದಿಯೂ ಬಂದಿದೆ.
ರೆಡ್, ಆರೆಂಜ್ ಅಲರ್ಟ್ ಜಿಲ್ಲೆಗಳಲ್ಲಿ ಕಟ್ಟೆಚ್ಚರ
ಹವಾಮಾನ ಪರಿಸ್ಥಿತಿಯನ್ನು ಪರಿಶೀಲಿಸಲು ರಾಜ್ಯದ ಪರಿಹಾರ ಆಯುಕ್ತ ಡಾ. ಹೃಷಿಕೇಶ್ ಭಾಸ್ಕರ್ ಯಶೋದ್ ಅವರು ರೆಡ್ ಮತ್ತು ಆರೆಂಜ್ ಅಲರ್ಟ್ ವ್ಯಾಪ್ತಿಯ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ನಡೆಸಿದರು.
ಸ್ಥಳೀಯ ಪರಿಸ್ಥಿತಿಯನ್ನು ನಿರಂತರವಾಗಿ ಗಮನಿಸುವಂತೆ ಹಾಗೂ ಅಧಿಕಾರಿಗಳು ಕ್ಷೇತ್ರದಲ್ಲೇ ಸಕ್ರಿಯವಾಗಿ ಕಾರ್ಯನಿರ್ವಹಿಸುವಂತೆ ಅವರು ಸೂಚಿಸಿದರು. ಯಾವುದೇ ತುರ್ತು ಪರಿಸ್ಥಿತಿ ಎದುರಾದರೆ ವಿಳಂಬವಿಲ್ಲದೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಡಳಿತಗಳಿಗೆ ನಿರ್ದೇಶನ ನೀಡಲಾಗಿದೆ.
ಪರಿಸ್ಥಿತಿ ಹದಗೆಟ್ಟರೆ ತಕ್ಷಣ ಸ್ಥಳಾಂತರ
ಮಳೆ ಅಥವಾ ಪ್ರವಾಹದ ಅಪಾಯ ಹೆಚ್ಚಾಗುವ ಪ್ರದೇಶಗಳಲ್ಲಿ ಜನರಿಗೆ ಮುಂಚಿತವಾಗಿಯೇ ಎಚ್ಚರಿಕೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅಗತ್ಯವಿದ್ದಲ್ಲಿ ಅಪಾಯದ ಪ್ರದೇಶಗಳಲ್ಲಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ತಕ್ಷಣ ಸ್ಥಳಾಂತರಿಸಲು ಸಿದ್ಧತೆ ಮಾಡಿಕೊಳ್ಳುವಂತೆ ನಿರ್ದೇಶಿಸಲಾಗಿದೆ.
ಸೆ.26ರಂದು ಅತ್ಯಂತ ಭಾರಿ ಮಳೆಯ ಎಚ್ಚರಿಕೆ
ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಸೆಪ್ಟೆಂಬರ್ 26ರಂದು ಪೂರ್ವ ಹಾಗೂ ಪಶ್ಚಿಮ ಉತ್ತರ ಪ್ರದೇಶದಲ್ಲಿ ಅತ್ಯಂತ ಭಾರಿ ಮಳೆಯ ಸಾಧ್ಯತೆ ಇದೆ. ಗುಡುಗು, ಮಿಂಚು ಹಾಗೂ ಬಲವಾದ ಗಾಳಿಯ ಮುನ್ಸೂಚನೆಯೂ ನೀಡಲಾಗಿದೆ. ಸೆಪ್ಟೆಂಬರ್ 27ರಂದು ಪೂರ್ವ ಉತ್ತರ ಪ್ರದೇಶದಲ್ಲಿ ಭಾರಿ ಮಳೆ ಹಾಗೂ ಪಶ್ಚಿಮ ಭಾಗದಲ್ಲಿ ಅತಿ ಭಾರಿ ಮಳೆಯ ಸಾಧ್ಯತೆ ಇದೆ.
ಲಖನೌಗೆ ಸಂಬಂಧಿಸಿದ IMD ಮುನ್ಸೂಚನೆಯಲ್ಲಿಯೂ ಸೆಪ್ಟೆಂಬರ್ 26ರಂದು ಭಾರಿ ಮಳೆಯ ಜೊತೆಗೆ ಗುಡುಗು, ಮಿಂಚು ಮತ್ತು ಗಂಟೆಗೆ 40–50 ಕಿ.ಮೀ ವೇಗದ ಗಾಳಿಯ ಸಾಧ್ಯತೆಯನ್ನು ಸೂಚಿಸಲಾಗಿದೆ.
ಹವಾಮಾನ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಸಾರ್ವಜನಿಕರು ಅನಗತ್ಯ ಪ್ರಯಾಣವನ್ನು ತಪ್ಪಿಸಿ, ಸ್ಥಳೀಯ ಆಡಳಿತ ಹಾಗೂ ಹವಾಮಾನ ಇಲಾಖೆಯ ಮುನ್ಸೂಚನೆಗಳನ್ನು ಗಮನಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.


