ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ ನವದೆಹಲಿಯ ಸರೋಜಿನಿ ನಗರದಲ್ಲಿರುವ ಶ್ರೀ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ದೇವಸ್ಥಾನದಲ್ಲಿ ಸಾಂಪ್ರದಾಯಿಕ ವಿಧಿವಿಧಾನಗಳೊಂದಿಗೆ ಪೂಜೆ–ಅರ್ಚನೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ, ದೇಶದ ಜನರ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಿದರು.
ಇದೇ ದಿನ ಪ್ರಧಾನಿ ನರೇಂದ್ರ ಮೋದಿ ಅವರು ಸರ್ಕಾರದ ಮುಖ್ಯಸ್ಥರಾಗಿ 25 ವರ್ಷಗಳ ಸಾರ್ವಜನಿಕ ಸೇವೆಯನ್ನು ಪೂರ್ಣಗೊಳಿಸಿದ ಮೈಲಿಗಲ್ಲನ್ನೂ ತಲುಪಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ದೇವಸ್ಥಾನ ಭೇಟಿ ವಿಶೇಷ ಮಹತ್ವ ಪಡೆದುಕೊಂಡಿದೆ.
25 ವರ್ಷಗಳ ಸಾರ್ವಜನಿಕ ಬದುಕಿನ ಮಹತ್ವದ ದಿನ
ನರೇಂದ್ರ ಮೋದಿ ಅವರು 2001ರ ಅಕ್ಟೋಬರ್ 7ರಂದು ಗುಜರಾತ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವ ಮೂಲಕ ಸರ್ಕಾರದ ಮುಖ್ಯಸ್ಥರಾಗಿ ತಮ್ಮ ಪಯಣ ಆರಂಭಿಸಿದ್ದರು. ಬಳಿಕ 2014ರಲ್ಲಿ ಭಾರತದ ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಅವರು, ನಿರಂತರವಾಗಿ ದೇಶದ ಆಡಳಿತದ ನೇತೃತ್ವ ವಹಿಸಿಕೊಂಡಿದ್ದಾರೆ.


