ಸುಕ್ಮಾ: ಛತ್ತೀಸ್ಗಢದ ಸುಕ್ಮಾ ಜಿಲ್ಲೆಯಲ್ಲಿ ಸ್ಫೋಟಕಗಳನ್ನು ನಿಷ್ಕ್ರಿಯಗೊಳಿಸುವ ಕಾರ್ಯಾಚರಣೆ ವೇಳೆ ಸಂಭವಿಸಿದ ಸ್ಫೋಟದಲ್ಲಿ ನಾಲ್ವರು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಸಿಬ್ಬಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.
ಬಸ್ತರ್ ವಿಭಾಗದ ಒಳನಾಡು ಹಾಗೂ ದೂರದ ಪ್ರದೇಶಗಳಲ್ಲಿ ಮಾವೋವಾದಿಗಳು ಹಲವು ಸುಧಾರಿತ ಸ್ಫೋಟಕ ಸಾಧನಗಳನ್ನು (ಐಇಡಿ) ಅಳವಡಿಸಿರುವ ಶಂಕೆ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಅವುಗಳನ್ನು ಪತ್ತೆಹಚ್ಚಿ ನಿಷ್ಕ್ರಿಯಗೊಳಿಸುವ ಕಾರ್ಯಾಚರಣೆ ನಡೆಸುತ್ತಿವೆ.
ಈ ಕಾರ್ಯಾಚರಣೆಯ ಭಾಗವಾಗಿ, ಸುಕ್ಮಾ ಜಿಲ್ಲೆಯ ಭೇಜ್ಜಿ ಪೊಲೀಸ್ ಠಾಣಾ ವ್ಯಾಪ್ತಿಯ ಆಲರ್ಮಡ್ಗು ಶಿಬಿರದ ಸಮೀಪದ ಬೋದ್ರಾಜ್ಪದರ್ ಹಳ್ಳದ ಬಳಿ ಸ್ಫೋಟಕ ನಿಷ್ಕ್ರಿಯಗೊಳಿಸುವ ತಜ್ಞರ ತಂಡ ಹಾಗೂ ಸಿಆರ್ಪಿಎಫ್ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದರು.
ಸ್ಫೋಟಕಗಳನ್ನು ಸುರಕ್ಷಿತವಾಗಿ ನಿಷ್ಕ್ರಿಯಗೊಳಿಸುವ ಪ್ರಕ್ರಿಯೆ ನಡೆಯುತ್ತಿದ್ದ ವೇಳೆ, ಸ್ಫೋಟಕದ ಒಂದು ತುಣುಕು ಸಮೀಪದಲ್ಲಿ ಬಿದ್ದು ಸ್ಫೋಟಗೊಂಡಿದೆ. ಈ ಘಟನೆಯಲ್ಲಿ ನಾಲ್ವರು ಭದ್ರತಾ ಸಿಬ್ಬಂದಿಗೆ ಗಾಯಗಳಾಗಿವೆ.
ಗಾಯಗೊಂಡ ಎಲ್ಲ ಸಿಬ್ಬಂದಿಗೆ ತಕ್ಷಣ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಯ ಅಗತ್ಯವಿರುವ ಹಿನ್ನೆಲೆಯಲ್ಲಿ ಅವರನ್ನು ಹೈದರಾಬಾದ್ಗೆ ಕರೆದೊಯ್ಯಲಾಗಿದೆ. ಅವರಲ್ಲಿ ಒಬ್ಬರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಬಸ್ತರ್ ವಿಭಾಗದ ದೂರದ ಪ್ರದೇಶಗಳಲ್ಲಿ ಅಳವಡಿಸಲಾಗಿರುವ ಸ್ಫೋಟಕಗಳನ್ನು ಪತ್ತೆಹಚ್ಚಿ ತೆರವುಗೊಳಿಸುವ ಕಾರ್ಯಾಚರಣೆಯನ್ನು ಭದ್ರತಾ ಪಡೆಗಳು ಮುಂದುವರಿಸಿವೆ.


