ನವದೆಹಲಿ: ಭಾರತ ಮತ್ತು ಇರಾನ್ನ ಉನ್ನತ ಭದ್ರತಾ ಅಧಿಕಾರಿಗಳು ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಪ್ರಾದೇಶಿಕ ಹಾಗೂ ಅಂತಾರಾಷ್ಟ್ರೀಯ ಬೆಳವಣಿಗೆಗಳು ಮತ್ತು ಉಭಯ ದೇಶಗಳ ಪರಸ್ಪರ ಹಿತಾಸಕ್ತಿಯ ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡಿದ್ದಾರೆ.
ನವದೆಹಲಿಯಲ್ಲಿರುವ ಇರಾನ್ ರಾಯಭಾರ ಕಚೇರಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಮಾಹಿತಿಯ ಪ್ರಕಾರ, ಇರಾನ್ನ ಸುಪ್ರೀಂ ನ್ಯಾಷನಲ್ ಸೆಕ್ಯುರಿಟಿ ಕೌನ್ಸಿಲ್ನ ಕಾರ್ಯದರ್ಶಿ ಮೊಹ್ಸೆನ್ ರೆಜಾಯೀ ಅವರು ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್ಎಸ್ಎ) ಅಜಿತ್ ದೋವಲ್ ಅವರೊಂದಿಗೆ ಸೋಮವಾರ ಸಂಜೆ ದೂರವಾಣಿ ಸಂಭಾಷಣೆ ನಡೆಸಿದರು.
ಈ ಮಾತುಕತೆಯಲ್ಲಿ ಪ್ರಸ್ತುತ ಪ್ರಾದೇಶಿಕ ಪರಿಸ್ಥಿತಿ, ಜಾಗತಿಕ ಬೆಳವಣಿಗೆಗಳು ಹಾಗೂ ಉಭಯ ರಾಷ್ಟ್ರಗಳಿಗೆ ಸಂಬಂಧಿಸಿದ ಪ್ರಮುಖ ವಿಚಾರಗಳ ಕುರಿತು ಚರ್ಚೆ ನಡೆಯಿತು ಎಂದು ರಾಯಭಾರ ಕಚೇರಿ ತಿಳಿಸಿದೆ.
ಆದರೆ, ಮಾತುಕತೆಯಲ್ಲಿ ಚರ್ಚಿಸಲಾದ ನಿರ್ದಿಷ್ಟ ವಿಷಯಗಳು ಅಥವಾ ಯಾವುದೇ ನಿರ್ಧಾರಗಳ ಕುರಿತು ಹೆಚ್ಚಿನ ವಿವರಗಳನ್ನು ಪ್ರಕಟಿಸಿಲ್ಲ.


