ಬೆಂಗಳೂರು: ಉತ್ಪಾದನಾ ಆಧಾರಿತ ಆರ್ಥಿಕ ಬೆಳವಣಿಗೆ ಮತ್ತು ಉದ್ಯೋಗ ಸೃಷ್ಟಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಭೂತಪೂರ್ವ ಆದ್ಯತೆ ನೀಡಿರುವುದರಿಂದ ದೇಶದಲ್ಲಿ ಕೈಗಾರಿಕಾ ವಲಯದ ಬೆಳವಣಿಗೆಗೆ ಹೊಸ ವೇಗ ದೊರೆತಿದ್ದು, ಲಕ್ಷಾಂತರ ಉದ್ಯೋಗಾವಕಾಶಗಳು ಸೃಷ್ಟಿಯಾಗಿವೆ ಎಂದು ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ನಗರದ ಕೇಂದ್ರ ಉತ್ಪಾದನಾ ತಂತ್ರಜ್ಞಾನ ಸಂಸ್ಥೆ (ಸಿಎಂಟಿಐ)ಯ 65ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಪ್ರಧಾನ ಕಚೇರಿ ಹೊಂದಿರುವ ಸಿಎಂಟಿಐ ದೇಶದ ಕಾರ್ಯತಂತ್ರದ ಮಹತ್ವದ ಕ್ಷೇತ್ರಗಳ ಸಂಶೋಧನೆ ಮತ್ತು ತಂತ್ರಜ್ಞಾನ ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡುತ್ತಿದೆ ಎಂದು ಶ್ಲಾಘಿಸಿದರು.
ಸಂಸ್ಥೆಯ ಸಾಮರ್ಥ್ಯವನ್ನು ಇನ್ನಷ್ಟು ವಿಸ್ತರಿಸಲು ಹಾಗೂ ರಾಷ್ಟ್ರವ್ಯಾಪಿ ಕಾರ್ಯಚಟುವಟಿಕೆಗಳನ್ನು ಬಲಪಡಿಸಲು ಅಗತ್ಯವಾದ ಆರ್ಥಿಕ ಮತ್ತು ಸಂಸ್ಥಾಗತ ಬೆಂಬಲವನ್ನು ಕೇಂದ್ರ ಸರ್ಕಾರ ಒದಗಿಸಲಿದೆ ಎಂದು ಅವರು ಭರವಸೆ ನೀಡಿದರು.
ಹಿಂದೂಸ್ತಾನ್ ಮಷಿನ್ ಟೂಲ್ಸ್ (ಎಚ್ಎಂಟಿ) ಸಂಸ್ಥೆಯ ಪುನರುಜ್ಜೀವನ ಕುರಿತು ಮಾತನಾಡಿದ ಕುಮಾರಸ್ವಾಮಿ, ಈ ಸಂಬಂಧ ಸಿದ್ಧಪಡಿಸಲಾಗುತ್ತಿರುವ ಸಮಗ್ರ ಯೋಜನಾ ವರದಿ (ಡಿಪಿಆರ್) ಅಂತಿಮ ಹಂತದಲ್ಲಿದ್ದು, ವಿವಿಧ ಹಿತಾಸಕ್ತಿಪಕ್ಷಗಳೊಂದಿಗೆ ಸಮಾಲೋಚನೆ ಪೂರ್ಣಗೊಂಡ ಬಳಿಕ ಅನುಷ್ಠಾನ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.
ನೀತಿ ಆಯೋಗದ ಮಾಜಿ ಸದಸ್ಯ ಡಾ. ವಿ.ಕೆ. ಸಾರಸ್ವತ್ ಅವರ ಅಧ್ಯಕ್ಷತೆಯಲ್ಲಿ ರಚಿಸಲಾದ ಉನ್ನತ ಮಟ್ಟದ ಸಮಿತಿಯು ಎಚ್ಎಂಟಿ ಪುನಶ್ಚೇತನ ಕಾರ್ಯತಂತ್ರ ರೂಪಿಸುವ ಕಾರ್ಯದಲ್ಲಿ ತೊಡಗಿಕೊಂಡಿದೆ. ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಸಂಸ್ಥೆಯ ಪುನರುಜ್ಜೀವನಕ್ಕಾಗಿ ಸಮಗ್ರ ಕಾರ್ಯಯೋಜನೆ ಸಿದ್ಧಪಡಿಸಲಾಗುವುದು ಎಂದು ಸಚಿವರು ಹೇಳಿದರು.
ದೇಶದ ಉತ್ಪಾದನಾ ಮತ್ತು ತಂತ್ರಜ್ಞಾನ ಕ್ಷೇತ್ರಗಳನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಕುಮಾರಸ್ವಾಮಿ ತಿಳಿಸಿದರು.


