ಅಯೋಧ್ಯೆ ರಾಮಮಂದಿರ ದೇಣಿಗೆ ಅಕ್ರಮ ಆರೋಪ: ಎಸ್‌ಐಟಿ ತನಿಖೆ ಆರಂಭ

1 Min Read
1 Min Read

ಅಯೋಧ್ಯೆ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ಮಂದಿರದಲ್ಲಿ ಭಕ್ತರಿಂದ ಸಲ್ಲಿಕೆಯಾಗಿರುವ ದೇಣಿಗೆ ಮತ್ತು ಅಮೂಲ್ಯ ವಸ್ತುಗಳ ದುರ್ಬಳಕೆ ಆರೋಪಗಳ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಇಂದು ಅಧಿಕೃತವಾಗಿ ತನಿಖೆ ಆರಂಭಿಸಿದೆ.

ಲಖನೌ ವಿಭಾಗೀಯ ಆಯುಕ್ತ ವಿಜಯ್ ವಿಶ್ವಾಸ್ ಪಂತ್ ನೇತೃತ್ವದ ಎಸ್‌ಐಟಿಯಲ್ಲಿ ಪೊಲೀಸ್ ಮಹಾನಿರೀಕ್ಷಕ (ಐಜಿ) ಕಿರಣ್ ಎಸ್ ಹಾಗೂ ಹಣಕಾಸು ಇಲಾಖೆಯ ವಿಶೇಷ ಕಾರ್ಯದರ್ಶಿ ನೀಲ್ ರತನ್ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ತಂಡದ ಎಲ್ಲಾ ಸದಸ್ಯರು ಅಯೋಧ್ಯೆಗೆ ಆಗಮಿಸಿ ತನಿಖಾ ಪ್ರಕ್ರಿಯೆಯನ್ನು ಆರಂಭಿಸಿದ್ದಾರೆ.

ತನಿಖೆಯ ಭಾಗವಾಗಿ ಎಸ್‌ಐಟಿ ಸದಸ್ಯರು ನಿನ್ನೆ ಅಯೋಧ್ಯೆಯ ಆಯುಕ್ತ ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ರಾಮಮಂದಿರ ಆವರಣಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ರಾಮಮಂದಿರದಲ್ಲಿ ಭಕ್ತರು ನೀಡಿರುವ ದೇಣಿಗೆ ಮತ್ತು ಅಮೂಲ್ಯ ವಸ್ತುಗಳ ನಿರ್ವಹಣೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಸ್‌ಐಟಿಯನ್ನು ರಚಿಸಿತ್ತು. ಸದ್ಯ ತನಿಖೆ ಆರಂಭಿಕ ಹಂತದಲ್ಲಿದ್ದು, ಯಾವುದೇ ಅಧಿಕೃತ ಮಾಹಿತಿ ಅಥವಾ ತೀರ್ಮಾನವನ್ನು ಅಧಿಕಾರಿಗಳು ಬಹಿರಂಗಪಡಿಸಿಲ್ಲ.

ಎಸ್‌ಐಟಿಗೆ ಏಳು ದಿನಗಳೊಳಗೆ ಪ್ರಾಥಮಿಕ ವರದಿ ಹಾಗೂ 15 ದಿನಗಳೊಳಗೆ ಅಂತಿಮ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರ ನಿರ್ದೇಶನ ನೀಡಿದೆ.

ಇನ್ನೊಂದೆಡೆ, ರಾಮಮಂದಿರ ನಿರ್ಮಾಣ ಸಮಿತಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ ಕೂಡ ಅಯೋಧ್ಯೆಯಲ್ಲಿ ಇದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತನಿಖೆಯಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯಕ್ಕೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಎಸ್‌ಐಟಿ ಕೇಳುವ ಎಲ್ಲ ರೀತಿಯ ಸಹಕಾರವನ್ನು ಜಿಲ್ಲಾಡಳಿತ ಹಾಗೂ ದೇವಾಲಯ ಆಡಳಿತ ಒದಗಿಸಲಿದೆ ಎಂದು ಅವರು ತಿಳಿಸಿದ್ದಾರೆ. ತನಿಖೆಯ ಮೂಲಕ ಸತ್ಯಾಂಶ ಹೊರಬಂದು ಭಕ್ತರ ವಿಶ್ವಾಸ ಮತ್ತಷ್ಟು ಬಲಗೊಳ್ಳಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

Share This Article
Leave a Comment