PM-VBRYಗೆ ಮತ್ತಷ್ಟು ವೇಗ: 15 ಲಕ್ಷ ಉದ್ಯೋಗಗಳಿಗೆ ಬೆಂಬಲ, ಯುವಕರಿಗೆ ಮೋದಿ ಸಂದೇಶ

2 Min Read
2 Min Read

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ (PM-VBRY) ಅಡಿಯಲ್ಲಿ ₹2,400 ಕೋಟಿ ಮೌಲ್ಯದ ಪ್ರೋತ್ಸಾಹಧನವನ್ನು ಬಿಡುಗಡೆ ಮಾಡಿದರು. ಉದ್ಯೋಗ ಸೃಷ್ಟಿ, ಉದ್ಯೋಗಾರ್ಹತೆ ವೃದ್ಧಿ ಹಾಗೂ ಸಾಮಾಜಿಕ ಭದ್ರತೆ ವಿಸ್ತರಣೆಗೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಈ ಯೋಜನೆಯ ಅನುಷ್ಠಾನದಲ್ಲಿ ಇದು ಮಹತ್ವದ ಹಂತವೆಂದು ಪರಿಗಣಿಸಲಾಗಿದೆ.

ಈ ಯೋಜನೆಯ ಮೂಲಕ ದೇಶಾದ್ಯಂತ ಸುಮಾರು 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿಗೆ ಉತ್ತೇಜನ ದೊರೆತಿದೆ. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, 21ನೇ ಶತಮಾನದಲ್ಲಿ ಕೌಶಲ್ಯಯುತ ಮಾನವ ಸಂಪನ್ಮೂಲ, ನವೋದ್ಯಮ ಮತ್ತು ಗುಣಮಟ್ಟಕ್ಕೆ ಆದ್ಯತೆ ನೀಡುವ ರಾಷ್ಟ್ರಗಳೇ ಜಾಗತಿಕ ಮಟ್ಟದಲ್ಲಿ ಮುನ್ನಡೆ ಸಾಧಿಸಲಿವೆ ಎಂದು ಹೇಳಿದರು.

ಭಾರತದ ಯುವಕರು ಮುಂದಿನ ದಿನಗಳಲ್ಲಿ ಜಾಗತಿಕ ಆರ್ಥಿಕ ಬೆಳವಣಿಗೆ, ನವೀನತೆ ಹಾಗೂ ಉದ್ಯಮಶೀಲತೆಯ ಪ್ರಮುಖ ಶಕ್ತಿಯಾಗಿ ಹೊರಹೊಮ್ಮಲಿದ್ದಾರೆ ಎಂಬ ವಿಶ್ವಾಸವನ್ನು ಪ್ರಧಾನಿ ವ್ಯಕ್ತಪಡಿಸಿದರು.

PM-VBRY ಯೋಜನೆ ಮೊದಲ ಬಾರಿಗೆ ಉದ್ಯೋಗಕ್ಕೆ ಸೇರುವ ಯುವಕರಿಗೆ ಬೆಂಬಲ ನೀಡುವುದರ ಜೊತೆಗೆ ಉದ್ಯಮ ವಲಯ ಮತ್ತು ಯುವಜನರ ನಡುವಿನ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಮೋದಿ ಹೇಳಿದರು. ಯುವಕರ ಕನಸು, ಕೌಶಲ್ಯ ಮತ್ತು ಸಾಮರ್ಥ್ಯವೇ ‘ವಿಕಸಿತ ಭಾರತ’ದ ಭವಿಷ್ಯವನ್ನು ರೂಪಿಸುತ್ತವೆ ಎಂದರು.

ಇಲ್ಲಿಯವರೆಗೆ ಈ ಯೋಜನೆಯಡಿ ಸುಮಾರು 70 ಲಕ್ಷ ಉದ್ಯೋಗಗಳು ಸೃಷ್ಟಿಯಾಗಿವೆ ಎಂದು ಪ್ರಧಾನಿ ಮಾಹಿತಿ ನೀಡಿದರು. ಹೊಸದಾಗಿ ಉದ್ಯೋಗ ಪಡೆದ ಸುಮಾರು 20 ಲಕ್ಷ ಯುವಕರು ಆರು ತಿಂಗಳ ಸೇವೆಯನ್ನು ಪೂರ್ಣಗೊಳಿಸಿದ್ದು, ಅವರಲ್ಲಿ 10 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಪ್ರೋತ್ಸಾಹಧನ ನೀಡಲಾಗಿದೆ. ಸುಮಾರು ₹2,000 ಕೋಟಿ ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ಜಮೆಯಾಗಿರುವುದಾಗಿ ಅವರು ತಿಳಿಸಿದರು.

ಫ್ರಾನ್ಸ್ ಮತ್ತು ಸ್ಲೋವಾಕಿಯಾ ಪ್ರವಾಸದ ವೇಳೆ ಭಾರತದ ಯುವಶಕ್ತಿಯ ಸಾಮರ್ಥ್ಯವನ್ನು ಜಗತ್ತು ಗುರುತಿಸುತ್ತಿರುವುದು ಸ್ಪಷ್ಟವಾಗಿ ಗೋಚರಿಸಿತು ಎಂದು ಪ್ರಧಾನಿ ಹೇಳಿದರು. ಜಾಗತಿಕ ಸ್ಪರ್ಧೆಯಲ್ಲಿ ಯಶಸ್ಸು ಸಾಧಿಸಲು ಗುಣಮಟ್ಟ ಮತ್ತು ಕೌಶಲ್ಯಕ್ಕೆ ಹೆಚ್ಚಿನ ಒತ್ತು ನೀಡಬೇಕೆಂದು ಅವರು ಕರೆ ನೀಡಿದರು.

ಯೋಜನೆಯಡಿ ಮೊದಲ ಬಾರಿಗೆ ಉದ್ಯೋಗಕ್ಕೆ ಸೇರುವವರಿಗೆ ₹15,000 ವರೆಗೆ ಪ್ರೋತ್ಸಾಹಧನ ನೀಡಲಾಗುತ್ತದೆ. ಹೆಚ್ಚುವರಿ ಉದ್ಯೋಗ ಸೃಷ್ಟಿಸುವ ಸಂಸ್ಥೆಗಳಿಗೆ ಪ್ರತಿ ಹೆಚ್ಚುವರಿ ಉದ್ಯೋಗಿಗೆ ತಿಂಗಳಿಗೆ ₹3,000 ವರೆಗೆ ಪ್ರೋತ್ಸಾಹಧನ ನೀಡುವ ಮೂಲಕ ಉದ್ಯೋಗಾವಕಾಶಗಳನ್ನು ವಿಸ್ತರಿಸಲು ಸರ್ಕಾರ ಉತ್ತೇಜನ ನೀಡುತ್ತಿದೆ.

ಕಾರ್ಯಕ್ರಮಕ್ಕೂ ಮುನ್ನ ವಿಜ್ಞಾನ ಭವನದಲ್ಲಿ ಕೆಲವು ಯುವಕರೊಂದಿಗೆ ಪ್ರಧಾನಿ ಮೋದಿ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವ ಮನ್‌ಸುಖ್ ಮಾಂಡವಿಯಾ, ಕಾರ್ಮಿಕರ ಹಿತಾಸಕ್ತಿಗಾಗಿ ಮೋದಿ ಸರ್ಕಾರ ನಾಲ್ಕು ಪ್ರಮುಖ ಕಾರ್ಮಿಕ ಸಂಹಿತೆಗಳನ್ನು ಜಾರಿಗೆ ತಂದಿದೆ ಎಂದು ಹೇಳಿದರು.

Share This Article
Leave a Comment