ಎಲ್ ನಿನೊ ಪರಿಣಾಮ: ಕಡಿಮೆ ಮಳೆಯ ಪರಿಸ್ಥಿತಿ ಪರಿಶೀಲಿಸಿದ ಕೇಂದ್ರ; ರಾಜ್ಯಗಳಿಗೆ ಅಮಿತ್ ಶಾ ಮಹತ್ವದ ಸೂಚನೆ

2 Min Read
2 Min Read

ನವದೆಹಲಿ: ಎಲ್ ನಿನೊ (El Niño) ಪರಿಣಾಮದಿಂದ ದೇಶದ ಕೆಲವು ಭಾಗಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಉಂಟಾಗಬಹುದಾದ ಬರ ಪರಿಸ್ಥಿತಿಯನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದಲ್ಲಿ ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಯಿತು.

ಸಭೆಯಲ್ಲಿ ಕೇಂದ್ರ ಗೃಹ ಕಾರ್ಯದರ್ಶಿ, ಕೃಷಿ ಕಾರ್ಯದರ್ಶಿ ಸೇರಿದಂತೆ ವಿವಿಧ ಸಚಿವಾಲಯಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಸಭೆಯಲ್ಲಿ ಮಾತನಾಡಿದ ಅಮಿತ್ ಶಾ, ಎಲ್ ನಿನೊ ಪರಿಣಾಮದಿಂದ ಉಂಟಾಗುತ್ತಿರುವ ಮಳೆ ಕೊರತೆ ಹಾಗೂ ಸಂಭವನೀಯ ಬರ ಪರಿಸ್ಥಿತಿಯನ್ನು ಕೇಂದ್ರ ಸರ್ಕಾರ ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದೆ ಎಂದು ತಿಳಿಸಿದರು.

ರೈತರಿಗೆ ಸ್ಥಳೀಯ ಹವಾಮಾನಕ್ಕೆ ಅನುಗುಣವಾಗಿ ಯಾವ ಬೆಳೆಗಳನ್ನು ಬೆಳೆಯಬೇಕು ಎಂಬ ಬಗ್ಗೆ ತಕ್ಷಣವೇ ಮಾರ್ಗದರ್ಶನ ನೀಡುವಂತೆ ಕೃಷಿ ಸಚಿವಾಲಯ ಹಾಗೂ ಸಂಬಂಧಿತ ಸಚಿವಾಲಯಗಳು ರಾಜ್ಯ ಸರ್ಕಾರಗಳೊಂದಿಗೆ ಸಮನ್ವಯ ಸಾಧಿಸಬೇಕು ಎಂದು ಅವರು ಸೂಚಿಸಿದರು.

ದೇಶದ ಎಲ್ಲಾ ಪ್ರಮುಖ ಜಲಾಶಯಗಳ ನೀರಿನ ಮಟ್ಟವನ್ನು ನಿರಂತರವಾಗಿ ಪರಿಶೀಲಿಸುವಂತೆ ಜಲಸಂಪನ್ಮೂಲ ಇಲಾಖೆಗೆ ನಿರ್ದೇಶನ ನೀಡಿದ ಅಮಿತ್ ಶಾ, ಕಡಿಮೆ ನೀರಿನಲ್ಲಿ ಬೆಳೆಯಬಹುದಾದ ಮೇವು ಬೆಳೆಗಳು, ಸಿರಿಧಾನ್ಯಗಳು ಹಾಗೂ ಬೇಳೆಕಾಳುಗಳಂತಹ ಪರ್ಯಾಯ ಬೆಳೆಗಳಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಸಲಹೆ ನೀಡಿದರು.

ವಿದ್ಯುತ್ ಸರಬರಾಜಿನಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕೇಂದ್ರ ವಿದ್ಯುತ್ ಸಚಿವಾಲಯಕ್ಕೂ ಅವರು ಸೂಚನೆ ನೀಡಿದರು.

ಸಭೆಯಲ್ಲಿ ದೇಶದಲ್ಲಿ ಅಕ್ಕಿ, ಗೋಧಿ ಸೇರಿದಂತೆ ಅಗತ್ಯ ಆಹಾರ ಧಾನ್ಯಗಳ ಸಮರ್ಪಕ ಸಂಗ್ರಹವಿದ್ದು, ಅಗತ್ಯ ವಸ್ತುಗಳ ಬೆಲೆ ಸ್ಥಿರವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಇದೇ ವೇಳೆ, ಇತ್ತೀಚಿನ ಭಾರೀ ಮಳೆ, ಪ್ರವಾಹ ಹಾಗೂ ಭೂಕುಸಿತದಿಂದ ಹಾನಿಗೊಳಗಾದ ಅಸ್ಸಾಂ ಮತ್ತು ಅರುಣಾಚಲ ಪ್ರದೇಶ ರಾಜ್ಯಗಳಿಗೆ ಕೇಂದ್ರ ಗೃಹ ಸಚಿವಾಲಯದ ಅಂತರ-ಸಚಿವಾಲಯ ತಂಡವನ್ನು ತಕ್ಷಣವೇ ಕಳುಹಿಸುವಂತೆ ಅಮಿತ್ ಶಾ ಆದೇಶಿಸಿದರು.

ಮೂಲಸೌಕರ್ಯ, ಕೃಷಿ ಭೂಮಿ ಹಾಗೂ ಜನವಸತಿ ಪ್ರದೇಶಗಳಿಗೆ ಉಂಟಾದ ಹಾನಿಯನ್ನು ಸ್ಥಳದಲ್ಲೇ ಪರಿಶೀಲಿಸಿ ಸಮಗ್ರ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ಪ್ರಸ್ತುತ ಅಸ್ಸಾಂನ ಹಲವು ಜಿಲ್ಲೆಗಳು ಪ್ರವಾಹದಿಂದ ತತ್ತರಿಸಿದ್ದರೆ, ಅರುಣಾಚಲ ಪ್ರದೇಶದಲ್ಲಿ ಭೂಕುಸಿತ ಮತ್ತು ರಸ್ತೆ ಸಂಪರ್ಕ ವ್ಯತ್ಯಯಗಳು ಉಂಟಾಗಿವೆ

Share This Article
Leave a Comment