ನವದೆಹಲಿ: ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ತೀವ್ರಗೊಳ್ಳುತ್ತಿರುವ ಹಿನ್ನೆಲೆ, ಭಾರತೀಯ ಹವಾಮಾನ ಇಲಾಖೆ (IMD) ಇಂದು ಗುಜರಾತ್, ಕೊಂಕಣ, ಗೋವಾ, ಮಧ್ಯ ಮಹಾರಾಷ್ಟ್ರ, ಪಶ್ಚಿಮ ಮಧ್ಯಪ್ರದೇಶ ಹಾಗೂ ಒಡಿಶಾ ರಾಜ್ಯಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಈ ಪ್ರದೇಶಗಳಲ್ಲಿ ಭಾರೀದಿಂದ ಅತಿ ಭಾರೀ ಮಳೆಯೊಂದಿಗೆ ಕೆಲವೆಡೆ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ.
ಮುಂದಿನ ಎರಡು ದಿನಗಳವರೆಗೆ ಪೂರ್ವ ರಾಜಸ್ಥಾನ, ಪೂರ್ವ ಮಧ್ಯಪ್ರದೇಶ, ಕರಾವಳಿ ಕರ್ನಾಟಕ, ತೆಲಂಗಾಣ ಹಾಗೂ ವಿದರ್ಭ ಪ್ರದೇಶಗಳಲ್ಲೂ ಭಾರೀದಿಂದ ಅತಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.
ಇದೇ ವೇಳೆ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಗಂಗಾ ಪಶ್ಚಿಮ ಬಂಗಾಳ, ಛತ್ತೀಸ್ಗಢ, ಉತ್ತರಾಖಂಡ, ಹಿಮಾಚಲ ಪ್ರದೇಶ, ಮರಾಠವಾಡ, ಪಶ್ಚಿಮ ರಾಜಸ್ಥಾನ ಹಾಗೂ ದಕ್ಷಿಣ ಭಾರತದ ಹಲವು ಭಾಗಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ತಿಳಿಸಿದೆ.
ರಾಜಧಾನಿ ನವದೆಹಲಿಯಲ್ಲಿ ಇಂದು ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ನಾಳೆ ಗರಿಷ್ಠ ತಾಪಮಾನ 34ರಿಂದ 36 ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ 26ರಿಂದ 28 ಡಿಗ್ರಿ ಸೆಲ್ಸಿಯಸ್ ನಡುವೆ ದಾಖಲಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


